ದೇಶ

ಕಾಶ್ಮೀರ: 300 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಬಸ್, ಭೀಕರ ಅಪಘಾತದಲ್ಲಿ 37 ಮಂದಿ ಸಾವು

Lingaraj Badiger

ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ ಸುಮಾರು 300 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಂದು ಬೆಳಗ್ಗೆ ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಬಳಿ ಈ ದುರ್ಘಟನೆ ನಡೆದಿದ್ದು, ಬಸ್‌ನಲ್ಲಿ 55 ಪ್ರಯಾಣಿಕರು ಇದ್ದರು ಎನ್ನಲಾಗಿದೆ.

ಸ್ಥಳೀಯರಲ್ಲದೆ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

"ಅಪಘಾತದ ಸ್ಥಳದಲ್ಲಿರುವ ದೋಡಾ ಜಿಲ್ಲಾಧಿಕಾರಿ ಶ್ ಹರ್ವಿಂದರ್ ಸಿಂಗ್ ಅವರು ನೀಡಿರುವ ಮಾಹಿತಿಯ ಪ್ರಕಾರ, ಭೀಕರ ಅಪಘಾತದಲ್ಲಿ ದುರದೃಷ್ಟವಶಾತ್ 36 ಜನ ಸಾವನ್ನಪ್ಪಿದ್ದಾರೆ ಮತ್ತು 19 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ" ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ.

ದುರ್ಘಟನೆಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

"ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿರುವ ಜೀವಹಾನಿಯಿಂದ ತೀವ್ರ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT