ದೇಶ

ಉತ್ತರಾಖಂಡ ಸುರಂಗ ಕುಸಿತ: ರಕ್ಷಣಾ ಕಾರ್ಯಾಚರಣೆ ಪರಿಶೀಲಿಸಿದ ನಿತಿನ್ ಗಡ್ಕರಿ, ಸಿಎಂ ಧಾಮಿ

Lingaraj Badiger

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಭಾನುವಾರ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಉತ್ತರಾಖಂಡ ಸಿಎಂ ಧಾಮಿ ಅವರು, ಎಲ್ಲರ ಜೀವ ಉಳಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಂಸ್ಥೆಗಳಿಗೆ ಅಗತ್ಯ ನೆರವು ನೀಡುತ್ತಿದೆ. ಅಪಾಯದಲ್ಲಿ ಸಿಲುಕಿರುವ ಕಾರ್ಮಿಕರು ಬೇಗ ಪಾರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಕಾರ್ಮಿಕರ ರಕ್ಷಣೆಗೆ ಇನ್ನೂ ನಾಲ್ಕೈದು ದಿನ ಬೇಕಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಸುರಂಗದ ಒಳಗಿನ ಸ್ಥಿತಿ ಚೆನ್ನಾಗಿಲ್ಲ ಎಂದು ಸುರಂಗದಲ್ಲಿ ಕೆಲಸ ಮಾಡುತ್ತಿರುವ ಲೋಡರ್ ಆಪರೇಟರ್ ಮೃತ್ಯುಂಜಯ್ ಕುಮಾರ್ ತಿಳಿಸಿದ್ದಾರೆ.

ಒಂದು ವಾರವಾದರೂ ಸಿಕ್ಕಿಬಿದ್ದ ಕಾರ್ಮಿಕರನ್ನು ಹೊರತರಲು ಸಾಧ್ಯವಾಗುತ್ತಿಲ್ಲ. ಒಳಗೆ ಸಿಕ್ಕಿಬಿದ್ದಿರುವ ಕಾರ್ಮಿಕರು ಒಣ ಆಹಾರವನ್ನು ಮಾತ್ರ ಸೇವಿಸಿ ಎಷ್ಟು ದಿನ ಬದುಕುತ್ತಾರೆ ಎಂದು ಮೃತ್ಯುಂಜಯ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ನವೆಂಬರ್ 12 ರಂದು ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸಿಲ್ಕ್ಯಾರಾ ಸುರಂಗದ ಒಂದು ಭಾಗ ಕುಸಿದ ಪರಿಣಾಮ ಸ್ಥಳದಲ್ಲಿದ್ದ 41 ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡು ಇಂದಿಗೆ ಎಂಟು ದಿನಗಳೇ ಕಳೆದಿವೆ. ಕಾರ್ಮಿಕರನ್ನು ಸ್ಥಳಾಂತರಿಸಲು ನಡೆಯುತ್ತಿರುವ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಹಲವು ಅಡೆತಡೆಗಳು ಉಂಟಾಗುತ್ತಿವೆ. ಭೂಕುಸಿತ ಸಹ ಸಂಭವಿಸಿದ್ದು, ಇದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT