ನವದೆಹಲಿ: ಕೇಂದ್ರ ಸಚಿವ ಹಾಗೂ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಸಲ್ಲಿಸಿರುವ ಅಫಿಡವಿಟ್‌ನಲ್ಲಿನ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸುವಂತೆ ಕೇಂದ್ರ ನೇರ ತೆರಿಗೆಗಳ ಮಂಡಳಿಗೆ (ಸಿಬಿಡಿಟಿ) ಚುನಾವಣಾ ಆಯೋಗ ಮಂಗಳವಾರ ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ವಿರುದ್ಧ ಕಣದಲ್ಲಿರುವ ರಾಜೀವ್ ಚಂದ್ರಶೇಖರ್ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಮ್ಮ ಆಸ್ತಿಯ ಬಗ್ಗೆ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಕಾರ್ಯವಿಧಾನದ ಪ್ರಕಾರ, ಚಂದ್ರಶೇಖರ್ ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿ ಸಲ್ಲಿಸಿರುವ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಲು ಸಿಬಿಡಿಟಿಗೆ ಚುನಾವಣಾ ಆಯೋಗ ನಿರ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.
ಅಫಿಡವಿಟ್‌ನಲ್ಲಿನ ಮಾಹಿತಿಗಳು ಸರಿಯಿಲ್ಲದಿದ್ದರೆ ಮತ್ತು ತಪ್ಪು ಮಾಡಿದ್ದರೆ, 1951ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 125ಎ ಅಡಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಕಾನೂನಿನ ಪ್ರಕಾರ, ನಾಮಪತ್ರಗಳಲ್ಲಿ ಅಥವಾ ಅಫಿಡವಿಟ್‌ನಲ್ಲಿ ಯಾವುದೇ ಮಾಹಿತಿಯನ್ನು ಮರೆಮಾಚುವುದು ಆರು ತಿಂಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶ ಮಾಡಿಕೊಡುತ್ತದೆ.