ನವದೆಹಲಿ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ವಿಚಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ವೇದಿಕೆಯಾಗುವ ಸಾಧ್ಯತೆಯಿದೆ.
ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬದಲಾಗಿ ಸಚಿವೆ ಅತಿಶಿ ಅವರು ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ ಎಂದು ನಿನ್ನೆಯಷ್ಟೇ ದೆಹಲಿ ಸಚಿವ ಗೋಪಾಲ್ ರೈ ಅವರು ಹೇಳಿದ್ದರು.
ಇಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದೆಹಲಿ ಸರ್ಕಾರದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲು ದೆಹಲಿ ಗೃಹ ಸಚಿವ ಕೈಲಾಶ್ ಗಹ್ಲೋಟ್ ಅವರನ್ನು ನಿಯೋಜನೆ ಮಾಡಿದ್ದಾರೆ ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.
"ಛತ್ರಸಾಲ್ ಸ್ಟೇಡಿಯಂನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲು ಸಚಿವ(ಗೃಹ), ಕೈಲಾಶ್ ಗಹ್ಲೋಟ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ನಿಯೋಜನೆ ಮಾಡಿದ್ದಾರೆ. ಅದಕ್ಕೆ ಅನುಗುಣವಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಬಹುದು" ಎಂದು ಲೆಫ್ಟಿನೆಂಟ್ ಗವರ್ನರ್ ಕಾರ್ಯದರ್ಶಿ ಆಶಿಶ್ ಕುಂದ್ರಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಇಂದು ಸಂಜೆ ರಾಜಭವನ ನೀಡಿದ ಸಂಕ್ಷಿಪ್ತ ಪ್ರಕಟಣೆಯಲ್ಲಿ, ಗಹ್ಲೋಟ್ ಅವರು ಧ್ವಜಾರೋಹಣ ಮಾಡಲಿದ್ದು ದೆಹಲಿ ಪೊಲೀಸರು ವಿಧ್ಯುಕ್ತವಾದ ಮಾರ್ಚ್-ಪಾಸ್ಟ್ ಪರೇಡ್ ಮಾಡುತ್ತಾರೆ. ಪೊಲೀಸರಿಗೆ ಸಂಬಂಧಿಸಿದ ವಿಷಯಗಳನ್ನು ಗೃಹ ಇಲಾಖೆಗೆ ನಿಯೋಜಿಸಲಾಗಿದೆ ಎಂದು ಹೇಳಿದೆ.