ನವದೆಹಲಿ: ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು. ಇದಕ್ಕೂ ಮುನ್ನ ರಾಜ್‌ಘಾಟ್‌ಗೆ ತೆರಳಿ ಮೋದಿ ನಮನ ಸಲ್ಲಿಸಿದರು.
ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಿದ ನಂತರ ಐಎಎಫ್ ಹೆಲಿಕಾಪ್ಟರ್ ಪುಷ್ಪವೃಷ್ಟಿ ಮಾಡಿತು.
ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದಾರೆ.
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಥೀಮ್ ‘ವೀಕ್ಷಿತ್ ಭಾರತ್ @ 2047’ ಆಗಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸುವ ಸರ್ಕಾರದ ಪ್ರಯತ್ನಗಳನ್ನು ಈ ಆಚರಣೆಗಳು ಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.