ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ(MoHFW) ವೈದ್ಯರ ಮತ್ತು ಆರೋಗ್ಯ ಸಿಬ್ಬಂದಿಯ ಸುರಕ್ಷತೆಯನ್ನು ಸುಧಾರಿಸುವ ಕ್ರಮಗಳನ್ನು ಶಿಫಾರಸು ಮಾಡಲು ಸಮಿತಿ ರಚಿಸುವುದಾಗಿ ಶನಿವಾರ ಪ್ರಕಟಿಸಿದೆ.
ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ದೇಶಾದ್ಯಂತ ವೈದ್ಯರು 24 ಗಂಟೆಗಳ ರಾಷ್ಟ್ರವ್ಯಾಪಿ ಪ್ರತಿಭಟನೆ ಪ್ರಾರಂಭಿಸಿದ ನಂತರ ಕೇಂದ್ರ ಆರೋಗ್ಯ ಸಚಿವಾಲಯ ಈ ಪ್ರಕಟಣೆ ಹೊರಡಿಸಿದೆ.
ಸಮಿತಿಯೊಂದಿಗೆ ತಮ್ಮ ಸಲಹೆಗಳನ್ನು ಹಂಚಿಕೊಳ್ಳಲು ರಾಜ್ಯ ಸರ್ಕಾರಗಳು ಸೇರಿದಂತೆ ಎಲ್ಲಾ ಇತರ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದು ಸಚಿವಾಲಯ ಹೇಳಿದೆ.
ಹೆಚ್ಚುತ್ತಿರುವ ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಹಿತಾಸಕ್ತಿಯಿಂದ ತಮ್ಮ ಕರ್ತವ್ಯವನ್ನು ಪುನರಾರಂಭಿಸುವಂತೆ ದೇಶಾದ್ಯಂತ ಆಂದೋಲನ ನಡೆಸುತ್ತಿರುವ ವೈದ್ಯರಿಗೆ ಕೇಂದ್ರ ಆರೋಗ್ಯ ಸಚಿವಾಲಯ ಮನವಿ ಮಾಡಿದೆ.
ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್(ಫೋರ್ಡಾ), ಭಾರತೀಯ ವೈದ್ಯಕೀಯ ಸಂಘ(ಐಎಂಎ) ಮತ್ತು ದೆಹಲಿಯ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ಸ್ಥಾನಿಕ ವೈದ್ಯರ ಸಂಘಗಳ ಪ್ರತಿನಿಧಿಗಳು ಕೋಲ್ಕತ್ತಾ ಘಟನೆಯ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿದರು.
ಕೆಲಸದ ಸ್ಥಳಗಳಲ್ಲಿ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಸಂಘಗಳು ತಮ್ಮ ಬೇಡಿಕೆಗಳನ್ನು ಮುಂದಿಟ್ಟಿವೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.