ಚೆನ್ನೈ: ಭಾರತೀಯ ಕರಾವಳಿ ಪಡೆಯ ಡೈರೆಕ್ಟರ್ ಜನರಲ್ ರಾಕೇಶ್ ಪಾಲ್ ಅವರು ಹೃದಯಾಘಾತದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಐಸಿಜಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಪಾಲ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸರ್ಕಾರಿ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ(ಆರ್‌ಜಿಜಿಹೆಚ್) ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಅವರು ಹೇಳಿದ್ದಾರೆ.
ತಮಿಳುನಾಡು ಸರ್ಕಾರ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ದಿ. ಎಂ ಕರುಣಾನಿಧಿ ಅವರ ಜನ್ಮ ಶತಮಾನೋತ್ಸವ ಸ್ಮರಣಾರ್ಥ ನಾಣ್ಯ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜನಾಥ್ ಸಿಂಗ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ಪಾಲ್ ನಿಧನದ ಸುದ್ದಿ ಕೇಳಿ ಆಸ್ಪತ್ರೆಗೆ ಧಾವಿಸಿ, ಅಂತಿಮ ನಮನ ಸಲ್ಲಿಸಿದ್ದಾರೆ.
ಪಾಲ್ ಅವರ ಪಾರ್ಥಿವ ಶರೀರವನ್ನು ದೆಹಲಿಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.