ಥಾಣೆ: ಖಾಸಗಿ ಶಾಲೆಯ ನರ್ಸರಿ ತರಗತಿಯ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದಲ್ಲಿ ನಡೆದ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ, ನಗರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಇಂದು ಬುಧವಾರ ಹೆಚ್ಚಿನ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ರೈಲ್ವೆ ನಿಲ್ದಾಣ ಮತ್ತು ಬದ್ಲಾಪುರದ ಇತರ ಭಾಗಗಳಲ್ಲಿ ಕಲ್ಲು ತೂರಾಟದ ಘಟನೆಗಳಲ್ಲಿ ಕನಿಷ್ಠ 17 ನಗರ ಪೊಲೀಸ್ ಸಿಬ್ಬಂದಿ ಮತ್ತು ಸುಮಾರು ಎಂಟು ರೈಲ್ವೆ ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು 72 ಜನರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದರು.
ಅಧಿಕಾರಿಗಳು ಹೇಳುವ ಪ್ರಕಾರ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ.
ಕಳೆದ ವಾರ ವಾಶ್‌ರೂಮ್‌ನಲ್ಲಿ ಶಾಲಾ ಸ್ವೀಪರ್ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ನಂತರ ಸಾವಿರಾರು ಪ್ರತಿಭಟನಾಕಾರರು ನಿಲ್ದಾಣದಲ್ಲಿ ರೈಲು ಹಳಿಗಳನ್ನು ತಡೆದು ಸ್ಥಳೀಯ ಶಾಲಾ ಕಟ್ಟಡಕ್ಕೆ ನುಗ್ಗಿ ಶಾಲಾ ಕಟ್ಟಡ ಧ್ವಂಸ ಮಾಡಿದ್ದರಿಂದ ಇಡೀ ಬದ್ಲಾಪುರ ನಗರ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿತ್ತು.
ಲೈಂಗಿಕ ದೌರ್ಜನ್ಯದ ಘಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಿ ಶಾಲಾ ಕಟ್ಟಡವನ್ನು ಧ್ವಂಸಗೊಳಿಸಿದ್ದರು. ಪ್ರತಿಭಟನಾಕಾರರನ್ನು ಚದುರಿಸಲು ಮತ್ತು ರೈಲು ಸಂಚಾರಕ್ಕೆ ಹಳಿಗಳನ್ನು ತೆರವುಗೊಳಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.
ಪ್ರತಿಭಟನೆ ಮತ್ತು ನಂತರದ ಹಿಂಸಾಚಾರದ ಹಿನ್ನೆಲೆಯಲ್ಲಿ ನಗರದಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಡಿಸಿಪಿ ಸುಧಾಕರ ಪತ್ತಾರೆ ಬುಧವಾರ ಪಿಟಿಐ ಜೊತೆ ಮಾತನಾಡಿದರು. ನಗರದ ಪರಿಸ್ಥಿತಿ ಅವಲೋಕಿಸಿದ ಬಳಿಕ ಇಂಟರ್‌ನೆಟ್ ಸೇವೆಯನ್ನು ಮರುಸ್ಥಾಪಿಸಲಾಗುವುದು ಎಂದರು.
ಪಟ್ಟಣದ ಬಹುತೇಕ ಶಾಲೆಗಳು ಇಂದು ಮುಚ್ಚಿವೆ. ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಸ್ಥಳೀಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಬದ್ಲಾಪುರ್ ರೈಲು ನಿಲ್ದಾಣದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು 32 ಜನರನ್ನು ಬಂಧಿಸಲಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ ಕಮಿಷನರ್ (ಜಿಆರ್‌ಪಿ) ರವೀಂದ್ರ ಶಿಶ್ವೆ ತಿಳಿಸಿದ್ದಾರೆ.