ಕೋಲ್ಕತ್ತಾ: ‘ನಬಣ್ಣ ಅಭಿಜನ್’ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ ಪೊಲೀಸರ ಕ್ರಮ ಖಂಡಿಸಿ ಪ್ರತಿಪಕ್ಷ ಬಿಜೆಪಿ ಬುಧವಾರ 12 ಗಂಟೆಗಳ ಕಾಲ ಪಶ್ಚಿಮ ಬಂಗಾಳ ಬಂದ್ ಗೆ ಕರೆ ನೀಡಿದೆ.
ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿ ಇಂದು ನಡೆದ 'Nabanna Abhijan' ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್, ಅಶ್ರುವಾಯು ಹಾಗೂ ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ.
“ಈ ನಿರಂಕುಶ ಆಡಳಿತವು ಜನರ ನೋವಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಬೇಕಾಗಿದೆ. ಮೃತ ವೈದ್ಯ ಸಹೋದರಿಯ ನ್ಯಾಯಕ್ಕಾಗಿ ಧ್ವನಿ ಎತ್ತಬೇಕಾಗಿದೆ. ನ್ಯಾಯ ಒದಗಿಸುವ ಬದಲು, ಮಮತಾ ಬ್ಯಾನರ್ಜಿ ಅವರ ಪೊಲೀಸರು ರಾಜ್ಯದ ಶಾಂತಿಪ್ರಿಯ ಜನರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಾಳೆ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ನಡೆಯಲಿರುವ ಸಾರ್ವತ್ರಿಕ ಮುಷ್ಕರದಲ್ಲಿ ಎಲ್ಲರೂ ಭಾಗವಹಿಸುವಂತೆ ಪಶ್ಚಿಮ ಬಂಗಾಳ ಜನತೆಗೆ ಮಜುಂದಾರ್ ಮನವಿ ಮಾಡಿದ್ದಾರೆ.