ಮುಂಬೈ: ಮೂರನೇ ಬಾರಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಂಬೈನ ರಾಜ್ಯ ಸಚಿವಾಲಯ `ಮಂತ್ರಾಲಯ'ದಲ್ಲಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಆಜಾದ್ ಮೈದಾನದಲ್ಲಿ ಸಂಜೆ 5.30ಕ್ಕೆ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಂತ್ರಾಲಯಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್ ಅವರಿಗೆ ಸಿಬ್ಬಂದಿ ಸಾಂಪ್ರದಾಯಿಕ ಸ್ವಾಗತ ಕೋರಿದರು.
ಛತ್ರಪತಿ ಶಿವಾಜಿ ಮಹಾರಾಜ್, ಜೀಜಾಬಾಯಿ, ಬಿ ಆರ್ ಅಂಬೇಡ್ಕರ್ ಮತ್ತು ಮಹಾತ್ಮ ಫುಲೆ ಅವರ ಭಾವಚಿತ್ರಗಳಿಗೆ ಫಡ್ನವಿಸ್ ಮತ್ತು ಅವರ ಉಪ ಮುಖ್ಯಮಂತ್ರಿಗಳು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಉಪಸ್ಥಿತರಿದ್ದರು.
ಫಡ್ನವಿಸ್ ಅಧ್ಯಕ್ಷತೆಯಲ್ಲಿ, ಶಿಂಧೆ ಮತ್ತು ಪವಾರ್ ಅವರು ಹೊಸ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ನಡೆಸಿದರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.
ಆಜಾದ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ 54 ವರ್ಷದ ಫಡ್ನವಿಸ್ ಅವರು ಮಹಾರಾಷ್ಟ್ರದ 20ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಉದ್ಯಮದ ಮುಖಂಡರು ಮತ್ತು ಬಾಲಿವುಡ್ ತಾರೆಯರು ಭಾಗವಹಿಸಿದ್ದರು.