ಅಮೃತಸರ: ಪಂಜಾಬ್‌ನ ಅಮೃತಸರದ ಪೊಲೀಸ್ ಠಾಣೆಯೊಂದರಲ್ಲಿ ಮಂಗಳವಾರ ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ಕೆಲಕಾಲ ಆತಂಕ ಮೂಡಿಸಿತ್ತು.
ದಾಳಿಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹ್ಯಾಂಡ್ ಗ್ರೆನೇಡ್ ದಾಳಿ ನಡೆದಿದ್ದ 15 ದಿನಗಳ ನಂತರ ನವಾನ್‌ಶಹರ್‌ನ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.
ಸ್ಥಳೀಯರ ಪ್ರಕಾರ ಇಸ್ಲಾಮಾಬಾದ್ ಪೊಲೀಸ್ ಠಾಣೆಯಲ್ಲಿ ಬೆಳಗಿನ ಜಾವ 3.15ರ ಸುಮಾರಿಗೆ ಸ್ಫೋಟದ ಸದ್ದು ಕೇಳಿಬಂದಿದೆ. ಆರಂಭದಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಅಮೃತಸರ ಪೊಲೀಸರು ಹೇಳಿದ್ದರು.
ಆದಾಗ್ಯೂ ಸಂಜೆ ಅಧಿಕೃತ ಹೇಳಿಕೆಯಲ್ಲಿ ಪೊಲೀಸ್ ಠಾಣೆಯ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ನಗರಕ್ಕೆ ಭೇಟಿ ನೀಡಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ವರದಿಯಾದ ಕೆಲವು ಗಂಟೆಗಳ ನಂತರ ಯಾದವ್ ಅಮೃತಸರಕ್ಕೆ ಭೇಟಿ ನೀಡಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಜಿಪಿ, 'ದಾಳಿ'ಗೆ ಕಾರಣರಾದವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ತಾಂತ್ರಿಕ ಮತ್ತು ಗುಪ್ತಚರದ ನೆರವು ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು