ಹೈದರಾಬಾದ್: ಡಿಸೆಂಬರ್ 4 ರಂದು 'ಪುಷ್ಪಾ-2' ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಮಂಗಳವಾರ ಚಿಕ್ಕಡಪಲ್ಲಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಇದರಂತೆ ನಟ ಅಲ್ಲು ಅರ್ಜುನ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ.
ಡಿಸೆಂಬರ್ 4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆಯ ನಂತರ, ಮೃತ ಮಹಿಳೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತದ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
ಡಿಸೆಂಬರ್ 13, 2024 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಬಂಧನದ ನಂತರ ತೆಲಂಗಾಣ ಹೈಕೋರ್ಟ್ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಆದಾಗ್ಯೂ, ಕಾರ್ಯವಿಧಾನದ ವಿಳಂಬದಿಂದಾಗಿ, ಮರುದಿನ ಬೆಳಿಗ್ಗೆ ಬಿಡುಗಡೆಯಾಗಿದ್ದರು. ಬಿಡುಗಡೆಗೂ ಮುನ್ನ ಚಂಚಲಗುಡ ಜೈಲಿನಲ್ಲಿ ರಾತ್ರಿಯನ್ನು ಕಳೆದಿದ್ದರು. ಜೈಲಿನಿಂದ ಹೊರಬಂದ ಬಳಿಕ ಅಲ್ಲು ಅರ್ಜುನ್ ಅವರು ತನಿಖೆಗೆ ಸಹಕರಿಸುವುದಾಗಿ ಹೇಳಿದ್ದರು.
ಈ ದುರಂತ ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ನಟನ ಬೆಂಬಲಿಗರು ಮಹಿಳೆಯ ಸಾವು ಸಂಪೂರ್ಣವಾಗಿ ಅಪಘಾತ ಎಂದು ಹೇಳಿದರೆ, ಅಧಿಕಾರಿಗಳು ಅರ್ಜುನ್ ಮತ್ತು ಅವರ ತಂಡದ ಬೇಜವಾಬ್ದಾರಿಯಿಂದ ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಆರೋಪಿಸಿದ್ದಾರೆ.