ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಡಿ.28 ಅಂದರೆ ಶನಿವಾರ ಬೆಳಗ್ಗೆ 11.45ಕ್ಕೆ ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಮಿಲಿಟರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವಾಲಯ ತಿಳಿಸಿದೆ. ಸಂಪೂರ್ಣ ಮಿಲಿಟರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲು ರಕ್ಷಣಾ ಸಚಿವಾಲಯವನ್ನು ಕೋರಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಇದಕ್ಕೂ ಮೊದಲು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ನಿರ್ಮಿಸುವ ಸ್ಥಳದಲ್ಲಿ ಅವರ ಅಂತ್ಯಕ್ರಿಯೆಯನ್ನು ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದರು. ಪ್ರಧಾನಿಯವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಪತ್ರ ಬರೆದು ಈ ಮನವಿ ಮಾಡಿದರು.
ರಾಷ್ಟ್ರನಾಯಕರು ಮತ್ತು ಮಾಜಿ ಪ್ರಧಾನಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸುವ ಸಂಪ್ರದಾಯವಿದೆ. ಅದರಂತೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿಯೇ ಎರಡು ಬಾರಿಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ನಡೆಯಬೇಕು ಎಂದು ಖರ್ಗೆ ಮನವಿ ಮಾಡಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಸೇರಿದಂತೆ ಇತರ ಅನೇಕ ಕೆಲಸಗಳನ್ನು ನಿಬಾಯಿಸಿ ದೇಶದ ಆರ್ಥಿಕ ಮತ್ತು ಹಣಕಾಸಿನ ವಿಷಯಗಳ ಅಪಾರ ಪಾಂಡಿತ್ಯ ಹೊಂದಿದ್ದ ಡಾ. ಮನ್ ಮೋಹನ್ ಸಿಂಗ್ ಅವರ ಬಗ್ಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ ಹಲವು ವಿಶ್ವ ನಾಯಕರು ಗೌರವಿಸುತ್ತಿದ್ದರು ಎಂದಿದ್ದಾರೆ.
ಜಾಗತಿಕ ಆರ್ಥಿಕ ಆರ್ಥಿಕ ಬಿಕ್ಕಟ್ಟನ್ನು ತಗ್ಗಿಸುವಲ್ಲಿ ಸಿಂಗ್ ಅವರ ಸಲಹೆ, ನಾಯಕತ್ವ ಮತ್ತು ಕೊಡುಗೆ ಪ್ರಮುಖವಾದದ್ದು, ರಾಷ್ಟ್ರ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದಾಗ, ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ ಅವರೊಂದಿಗೆ ಡಾ. ಮನಮೋಹನ್ ಸಿಂಗ್ ಅವರು ದೇಶವನ್ನು ಬಿಕ್ಕಟ್ಟಿನಿಂದ ಹೊರತೆಗೆದು ಆರ್ಥಿಕ ಸಮೃದ್ಧಿ ಮತ್ತು ಸ್ಥಿರತೆಯತ್ತ ಕೊಂಡೊಯ್ದಿದ್ದರು ಎಂದು ಪತ್ರದಲ್ಲಿ ಖರ್ಗೆ ತಿಳಿಸಿದ್ದಾರೆ.