ಹೈದರಾಬಾದ್: ಸಂಧ್ಯಾ ಚಿತ್ರಮಂದಿರದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾದ ಪ್ರಕರಣದಲ್ಲಿ ಆರೋಪಿಯಾಗಿರುವ ತೆಲುಗು ನಟ ಅಲ್ಲು ಅರ್ಜುನ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ಥಳೀಯ ನ್ಯಾಯಾಲಯದ ಮುಂದೆ ಶುಕ್ರವಾರ ಹಾಜರಾದರು.
11ನೇ ಆರೋಪಿಯಾಗಿರುವ ಅಲ್ಲು ಅರ್ಜುನ್ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಡಿಸೆಂಬರ್ 30 ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಘಟನೆಗೆ ಸಂಬಂಧಿಸಿದಂತೆ ಡಿಸೆಂಬರ್ 13 ರಂದು ಬಂಧನಕ್ಕೊಳಗಾಗಿದ್ದ ನಟನನ್ನು ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ಇಂದು ಕೊನೆಗೊಂಡಿದ್ದರಿಂದ ಮುಂದಿನ ವಿಚಾರಣೆಯ ಭಾಗವಾಗಿ ಅವರು ನ್ಯಾಯಾಲಯದ ಮುಂದೆ ಹಾಜರಾಗಬೇಕಿತ್ತು. ಹೀಗಾಗಿ, ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
ಅಲ್ಲು ಅರ್ಜುನ್ ಅವರನ್ನು ಜೈಲಿಗೆ ಸ್ಥಳಾಂತರಿಸಿದ ನಂತರ, ತೆಲಂಗಾಣ ಹೈಕೋರ್ಟ್ ಅವರಿಗೆ ನಾಲ್ಕು ವಾರಗಳ (ಡಿಸೆಂಬರ್ 13 ರಿಂದ) ಮಧ್ಯಂತರ ಜಾಮೀನು ನೀಡಿತು ಮತ್ತು ಡಿಸೆಂಬರ್ 14 ರಂದು ಅವರು ಜೈಲಿನಿಂದ ಬಿಡುಗಡೆಯಾದರು.
ಡಿಸೆಂಬರ್ 4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು ಮತ್ತು ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದರು.
ಘಟನೆ ನಂತರ, ಮೃತ ಮಹಿಳೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ನಗರ ಪೊಲೀಸರು ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತದ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ವಿಭಾಗಗಳ ಅಡಿಯಲ್ಲಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.