ದೇಶ

ಪ್ರಧಾನಿ ಮೋದಿ ಪದವಿ ವಿವಾದ: ಎಎಪಿ ನಾಯಕರ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

Lingaraj Badiger

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ಟೀಕೆ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ಸಂಸದ ಸಂಜಯ್ ಸಿಂಗ್ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, ಗುಜರಾತ್‌ನ ವಿಚಾರಣಾ ನ್ಯಾಯಾಲಯದ ಮುಂದೆ ಬಾಕಿ ಇರುವ ಪ್ರಕರಣವನ್ನು ರಾಜ್ಯದ ಹೊರಗೆ, ಅಂದರೆ ಕೋಲ್ಕತ್ತಾಗೆ ವರ್ಗಾಯಿಸುವಂತೆ ಕೋರಿ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ಈ ಆದೇಶ ನೀಡಿದೆ.

ವಿಚಾರಣಾ ನ್ಯಾಯಾಲಯ, ತಮಗೆ ನೀಡಿರುವ ಸಮನ್ಸ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕರು ಸಲ್ಲಿಸಿರುವ ಮನವಿಯ ಕುರಿತು ನಾಲ್ಕು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್, ಗುಜರಾತ್ ಹೈಕೋರ್ಟ್‌ಗೆ ಸೂಚಿಸಿದೆ.

ಈ ಮಧ್ಯೆ, ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲಾಗುವುದು ಎಂದು ಪೀಠ ಹೇಳಿದೆ.

ಸಂಜಯ್ ಸಿಂಗ್ ಪರ ವಕೀಲ ಕರಣ್ ಶರ್ಮಾ ಅವರ ಮೂಲಕ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ, ವಿಚಾರಣಾ ನ್ಯಾಯಾಲಯದ ವಿಚಾರಣೆಯಲ್ಲಿ ಪಕ್ಷಪಾತ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ತಮ್ಮ ಅರ್ಜಿಯು ಹೈಕೋರ್ಟ್‌ನಲ್ಲಿ ಬಾಕಿ ಇರುವಾಗ, ವಿಚಾರಣಾ ನ್ಯಾಯಾಧೀಶರು ಈ ವಿಷಯವನ್ನು ಮುಂದುವರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

SCROLL FOR NEXT