ದೇಶ

ಗುಜರಾತ್‌: ಹರಣಿ ಸರೋವರದಲ್ಲಿ ದೋಣಿ ಮುಳುಗಿ 12 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು ಸಾವು

Lingaraj Badiger

ಅಹಮದಾಬಾದ್: ಗುಜರಾತ್‌ನ ವಡೋದರಾದ ಹರಣಿ ಸರೋವರದಲ್ಲಿ ದೋಣಿ ಮುಳುಗಿ 12 ಶಾಲಾ ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಒಟ್ಟು 14 ಜನ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ನಡೆದಿದೆ.

ದೋಣಿಯಲ್ಲಿ ನ್ಯೂ ಸನ್‌ರೈಸ್ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಮತ್ತು ಅವರಲ್ಲಿ ಯಾರೂ ಲೈಫ್ ಜಾಕೆಟ್‌ಗಳನ್ನು ಧರಿಸಿರಲಿಲ್ಲ ಎಂದು ವರದಿಯಾಗಿದೆ.

ಉಳಿದ ವಿದ್ಯಾರ್ಥಿಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೋಣಿ ಮುಳುಗಿ ಆರು ವಿದ್ಯಾರ್ಥಿಗಳು ಮೃತಪಟ್ಟಿರುವುದನ್ನು ಗುಜರಾತ್ ಶಿಕ್ಷಣ ಸಚಿವ ಕುಬೇರ್ ದಿಂಡೋರ್ ಅವರು ಖಚಿತಪಡಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸುತ್ತಿದ್ದು, ಹಲವು ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ದೋಣಿಯಲ್ಲಿ 27 ಮಕ್ಕಳಿದ್ದರು, ನಾವು ಇತರರನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ವಡೋದರಾ ಜಿಲ್ಲಾಧಿಕಾರಿ ಎಬಿ ಗೋರ್ ಅವರು ಹೇಳಿದ್ದಾರೆ.

ಏತನ್ಮಧ್ಯೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ದುರಂತದ ನಂತರ ಸಂತಾಪ ಸೂಚಿಸಿದ್ದು, ಪ್ರಾಣ ಕಳೆದುಕೊಂಡ ಅಮಾಯಕ ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು. ದೇವರು ಅವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

SCROLL FOR NEXT