ದೇಶ

ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ  ಮೋದಿ, ದೆಹಲಿಯಲ್ಲಿ ಹೆಚ್ಚಿದ ಭದ್ರತೆ

Manjula VN

ನವದೆಹಲಿ: ದೇಶದಾದ್ಯಂದ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ದೇಶದ ಎಲ್ಲಾ ಜನತೆಗೂ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್ ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪೋಸ್ಟ್ ಮಾಡಿ, ದೇಶದ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳು. ಈ ಐತಿಹಾಸಿಕ ಸಂದರ್ಭದಲ್ಲಿ, ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ, ಜೈ ಹಿಂದ್ ಎಂದು ತಿಳಿಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಪೋಸ್ಟ್ ಮಾಡಿ, ದೇಶದ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು. ಪ್ರಜಾಪ್ರಭುತ್ವದ ಈ ಶುಭ ಸಂದರ್ಭದಲ್ಲಿ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು, ವೀರ ಸೈನಿಕರಿಗೆ ವಂದಿಸುತ್ತೇನೆ. ಬನ್ನಿ, ನಾವೆಲ್ಲರೂ ಒಟ್ಟಾಗಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಮ್ಮ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಪ್ರತಿಜ್ಞೆ ಮಾಡೋಣ ಮತ್ತು ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಕೊಡುಗೆ ನೀಡೋಣ ಎಂದು ಹೇಳಿದ್ದಾರೆ.

ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಪೋಸ್ಟ್ ಮಾಡಿ, ಎಲ್ಲರಿಗೂ ಗಣರಾಜ್ಯೋತ್ಸವ ದಿನದ ಶುಭಾಶಯಗಳು. ಈ ಸಂದರ್ಭದಲ್ಲಿ ರಾಷ್ಟ್ರದ ಅಭ್ಯುದಯಕ್ಕಾಗಿ ದುಡಿದ ಎಲ್ಲಾ ಮಹನೀಯರನ್ನು ಸ್ಮರಿಸೋಣ. ಅನೇಕರ ತ್ಯಾಗ ಬಲಿದಾನಗಳಿಂದ ಪಡೆದುಕೊಂಡ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳುವುದರ ಜತೆಗೆ, ಭಾರತವು ಮಹಾನ್ ಜಾಗತಿಕ ಶಕ್ತಿಯಾಗಿ ಅವಿರ್ಭವಿಸುವ ನಿಟ್ಟಿನಲ್ಲಿ ಒಟ್ಟಾಗಿ ದುಡಿಯೋಣ ಹೇಳಿದ್ದಾರೆ.

ದೆಹಲಿಯಲ್ಲಿ ಹೆಚ್ಚಿದ ಭದ್ರತೆ
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಯಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದೆ. ದೆಹಲಿಯಲ್ಲಿ ಸೇನೆ, ಖಾಕಿ ಕೋಟೆಯೇ ನಿರ್ಮಾಣವಾಗಿದ್ದು, ಡ್ರೋಣ್ ಗಳ ಹಾರಾಟವನ್ನು ನಿಷೇಧಿಸಲಾಗಿದೆ.

ಕಟ್ಟಡಗಳ ಮೇಲೆ ಶಾರ್ಪ್‌ಶೂಟರ್‌ಗಳನ್ನು ನಿಯೋಜಿಸಲಾಗಿದೆ. ಎಲ್ಲೆಲ್ಲೂ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಕಾರ್ಯಕ್ರಮಕ್ಕೆ ಬರೋರಿಗೆ, ತಿಂಡಿ, ನೀರಿನ ಬಾಟಲ್, ಗನ್, ಚಾಕು, ಚೂಪಾದವಸ್ತುಗಳು, ಕೊಡೆ, ಕಪ್ಪುವಸ್ತ್ರ, ಕ್ಯಾಮರಾ, ರೇಡಿಯೋ, ಸ್ಯೂಟ್‌ಕೇಸ್, ಬ್ಯಾಗ್, ಸಿಗರೇಟ್, ಬೀಡಿ, ಬೆಂಕಿಪೊಟ್ಟಣ, ಅಗ್ನಿಕಾರಕ ವಸ್ತುಗಳನ್ನು ನಿಷೇಧಿಸಲಾಗಿದೆ.

SCROLL FOR NEXT