ಪುಣೆ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧಿತರಾಗಿರುವ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರನ್ನು ಗುರುವಾರ ಮಹಾರಾಷ್ಟ್ರದ ಪುಣೆ ಜಿಲ್ಲೆಯ ನ್ಯಾಯಾಲಯ ಜುಲೈ 20 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.
ರಾಯಗಢ ಜಿಲ್ಲೆಯ ಮಹಾಡ್‌ನ ಲಾಡ್ಜ್‌ನಲ್ಲಿ ಇಂದು ಬೆಳಗ್ಗೆ ಮನೋರಮಾ ಅವರನ್ನು ಬಂಧಿಸಲಾಗಿತ್ತು. ನಂತರ ಮನೋರಮಾ ಅವರನ್ನು ಪುಣೆ ಜಿಲ್ಲೆಯ ಪೌಡ್ ಪೊಲೀಸ್ ಠಾಣೆಗೆ ಕರೆತರಲಾಯಿತು.
ಬಳಿಕ ಸ್ಥಳೀಯ ನ್ಯಾಯಾಲಯದ ಮುಂದೆ ಮನೋರಮಾ ಅವರನ್ನು ಹಾಜರುಪಡಿಸಲಾಗಿದ್ದು, ಆರೋಪಿಯ ವಿಚಾರಣೆ ನಡೆಸಿದ ಕೋರ್ಟ್ ಜುಲೈ 20ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗ್ರಾಮಸ್ಥರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕುವ ಮೂಲಕ ಪರವಾನಗಿ ಪಡೆದ ಗನ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಪುಣೆ ಪೊಲೀಸರು ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಪುಣೆ ಜಿಲ್ಲೆಯ ಮುಲ್ಶಿ ತಹಸಿಲ್‌ನಲ್ಲಿ ಮಹಾರಾಷ್ಟ್ರದ ನಿವೃತ್ತ ಸರ್ಕಾರಿ ಅಧಿಕಾರಿಯಾಗಿರುವ ಪೂಜಾ ಅವರ ತಂದೆ ದಿಲೀಪ್ ಖೇಡ್ಕರ್ ಅವರು ಖರೀದಿಸಿದ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದ್ದು, ಈ ವೇಳೆ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರು ರೈತರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ.
ಅಕ್ಕಪಕ್ಕದ ರೈತರ ಜಮೀನನ್ನು ಖೇಡ್ಕರ್ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಎರಡು ನಿಮಿಷಗಳ ಈ ವಿಡಿಯೋದಲ್ಲಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರು ತಮ್ಮ ಖಾಸಗಿ ಭದ್ರತಾ ಸಿಬ್ಬಂದಿಯೊಂದಿಗೆ ನೆರೆಹೊರೆಯವರೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಾರೆ.