ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಮಲಿಕ್ ಪರ ವಾದ ಮಂಡಿಸಿದ ವಕೀಲರ ಮನವಿಯನ್ನು ಪರಿಗಣಿಸಿ, ಜಾಮೀನು ಮಂಜೂರು ಮಾಡಿದ್ದು, ಇದು ಬಾಂಬೆ ಹೈಕೋರ್ಟ್‌ನಲ್ಲಿ ಸಾಮಾನ್ಯ ಜಾಮೀನು ಅರ್ಜಿ ವಿಲೇವಾರಿ ಮಾಡುವವರೆಗೆ ಮಾನ್ಯವಾಗಿರುತ್ತದೆ ಎಂದು ಹೇಳಿದೆ.
ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಆರೋಪಿಗೆ ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ ಮತ್ತು ಮಧ್ಯಂತರ ವೈದ್ಯಕೀಯ ಜಾಮೀನು ನೀಡಬಹುದು ಎಂದು ಹೇಳಿದರು.
ಪರಾರಿಯಾದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2022 ರ ಫೆಬ್ರವರಿ ಇಡಿ ಮಲಿಕ್ ಅವರನ್ನು ಬಂಧಿಸಿತ್ತು.
ಮಲಿಕ್ ಅವರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ.
1993 ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ(ತಡೆ) ಕಾಯಿದೆಯಡಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ದಾಖಲಿಸಿದ ಎಫ್‌ಐಆರ್ ಆಧರಿಸಿ ಮಲಿಕ್ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ.