ನವದೆಹಲಿ: ಬಿಜು ಜನತಾ ದಳ (ಬಿಜೆಡಿ) ರಾಜ್ಯಸಭಾ ಸಂಸದೆ ಮಮತಾ ಮೊಹಾಂತಾ ಅವರು ಬುಧವಾರ ಸದನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಇದಲ್ಲದೇ ಬಿಜು ಜನತಾ ದಳದ ಪ್ರಾಥಮಿಕ ಸದಸ್ಯತ್ವಕ್ಕೂ ಮಮತಾ ಮೊಹಾಂತಾ ರಾಜೀನಾಮೆ ನೀಡಿದ್ದಾರೆ. ಪಕ್ಷದ ಅಧ್ಯಕ್ಷ ನವೀನ್ ಪಟ್ನಾಯಕ್ ಅವರನ್ನು ಉದ್ದೇಶಿಸಿ ತಮ್ಮ ರಾಜೀನಾಮೆ ಪತ್ರದಲ್ಲಿ ಅವರು ಬರೆದಿದ್ದಾರೆ. ನಾನು 2024ರ ಜುಲೈ 31ರಿಂದ ಬಿಜು ಜನತಾ ದಳದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಮಯೂರ್‌ಭಂಜ್‌ನ ಜನರಿಗೆ ಸೇವೆ ಸಲ್ಲಿಸಲು ಮತ್ತು ಒಡಿಶಾದ ಸಮಸ್ಯೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರಸ್ತಾಪಿಸಲು ನನಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಬರೆದಿದ್ದಾರೆ.
ಬಿಜು ಜನತಾ ದಳದಲ್ಲಿ ನನ್ನ ಮತ್ತು ನನ್ನ ಸಮುದಾಯದವರ ಸೇವೆಯ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕಠಿಣ ನಿರ್ಧಾರ ಕೈಗೊಂಡಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ನಾನು ವಿನಂತಿಸುತ್ತೇನೆ. ಮಮತಾ ಮೊಹಾಂತಾ ಅವರು ಏಪ್ರಿಲ್ 2020ರಲ್ಲಿ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದರು.