ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಮಹಾತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು. 7 ಹಂತಗಳಲ್ಲಿ ನಡೆದ ಚುನಾವಣೆಯ ಮಹಾ ಫಲಿತಾಂಶಕ್ಕಾಗಿ ಇಡೀ ಜಗತ್ತೇ ಕಾತರದಿಂದ ಕಾಯುತ್ತಿದೆ.
ಏಪ್ರಿಲ್ 19ರಿಂದ ಆರಂಭವಾಗಿದ್ದ ಲೋಕಸಭೆ ಚುನಾವಣೆಯ ಮತದಾನ ಜೂನ್ 1ರವರೆಗೂ ನಡೆದಿತ್ತು. ಹೀಗಾಗಿ ಸುದೀರ್ಘವಾಗಿ ನಡೆದ ಚುನಾವಣಾ ಪ್ರಕ್ರಿಯೆ ಎಂಬ ದಾಖಲೆಯನ್ನೂ ಬರೆದಿದೆ. ಹಲವು ಅಡೆತಡೆಗಳು, ಸಾಕಷ್ಟು ಸವಾಲುಗಳ ಮಧ್ಯೆ ಕೇಂದ್ರ ಚುನಾವಣಾ ಆಯೋಗ ಯಶಸ್ವಿಯಾಗಿ ಚುನಾವಣಾ ಪ್ರಕ್ರಿಯೆ ಮುಗಿಸಿತ್ತು. ಆದರೆ, ಇಂದು ನಡೆಯುವ ಮತ ಎಣಿಕೆಯೊಂದಿಗೆ ಈ ಎಲ್ಲಾ ಪ್ರಕ್ರಿಯೆಗಳೂ ಮುಕ್ತಾಯ ಕಾಣಲಿವೆ.
ಈಗಾಗಲೇ ಬಹುತೇಕ ಎಲ್ಲ ಮತದಾನೋತ್ತರ ಸಮೀಕ್ಷೆಗಳು ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗುವ ಭವಿಷ್ಯ ನುಡಿದಿವೆ. ಒಂದು ವೇಳೆ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದದ್ದೇ ಆದಲ್ಲಿ ಹೊಸದೊಂದು ದಾಖಲೆ ನಿರ್ಮಾಣವಾಗಲಿದೆ.
ಸತತ ಮೂರನೇ ಬಾರಿಗೆ ಪ್ರಧಾನಿಯಾದ ಜವಾಹರ ಲಾಲ್ ನೆಹರು ಅವರ ದಾಖಲೆಯನ್ನು ಮೋದಿ ಸರಿಗಟ್ಟಲಿದ್ದಾರೆ. ಇದೇ ರೀತಿ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟ ಗೆದ್ದರೆ, ಪ್ರಧಾನಿ ಮೋದಿಯ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ದಾಖಲೆಯೂ ಆಗಬಹುದು.
ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಬೇಕಾದರೆ ಒಟ್ಟು 543 ಲೋಕಸಭಾ ಸ್ಥಾನಗಳ ಪೈಕಿ 272 ಸ್ಥಾನಗಳು ಬೇಕು.
ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆ ಶುರುವಾಗಲಿದೆ. ಇದಕ್ಕೂ ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತದೆ. ದೇಶದೆಲ್ಲೆಡೆ ಮತ ಎಣಿಕಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಉನ್ನತ ದರ್ಜೆಯ ಅಧಿಕಾರಿಗಳು ಭದ್ರತೆಯ ಮೇಲ್ವಿಚಾರಣೆ ಹೊತ್ತಿದ್ದಾರೆ. ಈ ಪ್ರಕ್ರಿಯೆಯಲ್ಲಿ ಸುಮಾರು 70 ರಿಂದ 80 ಲಕ್ಷ ಚುನಾವಣಾ ಸಿಬ್ಬಂದಿ ಪಾಲ್ಗೊಂಡಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.