ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಚರ್ಚಿಸಲು ಜೂನ್ 8 ರಂದು ಕಾಂಗ್ರೆಸ್ ತನ್ನ ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ.
ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಈ ಕುರಿತು ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಸಿಡಬ್ಲ್ಯುಸಿ ಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶನಿವಾರ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಕಾಂಗ್ರೆಸ್ ಚುನಾವಣೆಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ 52 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 99 ಸ್ಥಾನ ಗೆದ್ದಿದೆ.
10 ವರ್ಷಗಳ ನಂತರ ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಕಾಂಗ್ರೆಸ್ ಹೊಂದಲಿದೆ. 2014 ಮತ್ತು 2019 ರಲ್ಲಿ ಲೋಕಸಭೆ ಸ್ಥಾನಗಳ ಒಟ್ಟು ಸ್ಥಾನಗಳ ಶೇಕಡಾ 10 ಕ್ಕಿಂತ ಕಡಿಮೆಯಿದ್ದ ಕಾರಣ ಅಧಿಕೃತ ಪ್ರತಿಫಕ್ಷದ ಸ್ಥಾನ ಪಡೆಯಲು ವಿಫಲವಾಗಿತ್ತು.
ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.