ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಎನ್‌ಡಿಎ ಸರ್ಕಾರದಲ್ಲಿ ಕರ್ನಾಟಕದ ಹಿರಿಯ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ ಮತ್ತು ವಿ ಸೋಮಣ್ಣ ಅವರು ರಾಜ್ಯ ಸಚಿವರಾಗಿ(MoS) ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
ಕಳೆದ ವರ್ಷ ನಡೆದಿದ್ದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೈಕಮಾಂಡ್ ಹೇಳಿದಂತೆ ಸ್ವಕ್ಷೇತ್ರ ಬಿಟ್ಟು ಎರಡೂ ಕ್ಷೇತ್ರಳಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ವಿ ಸೋಮಣ್ಣ ಅವರಿಗೆ ಮಣೆ ಹಾಕಲಾಗಿದೆ.
ಇಂದು ರಾತ್ರಿ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದೆ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಸೋಮಣ್ಣ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ(MoS)ಯಾಗಿದ್ದ ಶೋಭಾ ಕರಂದ್ಲಾಜೆ ಅವರು ಮತ್ತೊಮ್ಮೆ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
57 ವರ್ಷದ ಶೋಭಾ ಕರಂದ್ಲಾಜೆ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿದ್ದು, ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿ ಹಾಗೂ ಇಂಧನ ಖಾತೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಂದು ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸಿದರು. ಮೋದಿ ಜೊತೆ ಕರ್ನಾಟಕದ ನಾಲ್ವರು ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯದಿಂದ ಎಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತು ವಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.