ದೇಶ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ED ಕೇಸು: BRS ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು ನಕಾರ

Sumana Upadhyaya

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದ್ರೇಶ್ ಮತ್ತು ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ನ್ಯಾಯಪೀಠವು ಕವಿತಾ ಅವರನ್ನು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸೂಚಿಸಿದೆ. ಇದು ಈ ನ್ಯಾಯಾಲಯವು ಅನುಸರಿಸುತ್ತಿರುವ ಅಭ್ಯಾಸವಾಗಿದೆ, ಶಿಷ್ಠಾಚಾರವನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ನಿಬಂಧನೆಗಳನ್ನು ಪ್ರಶ್ನಿಸಿ ಕವಿತಾ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಇಡಿಗೆ ನೋಟಿಸ್ ಜಾರಿ ಮಾಡಿ ಆರು ವಾರಗಳಲ್ಲಿ ಅದರ ಪ್ರತಿಕ್ರಿಯೆಯನ್ನು ಕೇಳುತ್ತಿದೆ ಎಂದು ನ್ಯಾಯಪೀಠ ಹೇಳಿದೆ.

ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿ ಉಳಿದಿರುವ ವಿಷಯಗಳೊಂದಿಗೆ ಬರಲಿದೆ ಎಂದು ಕವಿತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ನ್ಯಾಯಪೀಠ ತಿಳಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕವಿತಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ತೆಲಂಗಾಣ ವಿಧಾನ ಪರಿಷತ್ ಸದಸ್ಯೆ ಹಾಗೂ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಮಾರ್ಚ್ 15 ರಂದು ಬಂಧಿಸಲಾಗಿದ್ದು, ಪ್ರಕರಣದಲ್ಲಿ ಮಾರ್ಚ್ 23 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.

SCROLL FOR NEXT