ದೆಹಲಿಯಲ್ಲಿ ಬಿಜೆಪಿ ಪ್ರತಿಭಟನೆ
ದೆಹಲಿಯಲ್ಲಿ ಬಿಜೆಪಿ ಪ್ರತಿಭಟನೆ 
ದೇಶ

ಸಿಎಂ ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಬಿಜೆಪಿ ಪ್ರತಿಭಟನೆ

Lingaraj Badiger

ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ದೆಹಲಿ ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬಿಜೆಪಿ ಕಾರ್ಯಕರ್ತರು ಇಂದು ಫಿರೋಜ್‌ಶಾ ಕೋಟ್ಲಾ ಕ್ರೀಡಾಂಗಣದ ಬಳಿ ಜಮಾಯಿಸಿ, ದೆಹಲಿ ಸೆಕ್ರೆಟರಿಯೇಟ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ವಿರುದ್ಧ ಘೋಷಣೆಗಳನ್ನು ಕೂಗಿದರು. ಎಎಪಿ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದರು.

ಬಿಜೆಪಿಯ ಹಿರಿಯ ನಾಯಕ ಮತ್ತು ಸಂಸದ ಹರ್ಷವರ್ಧನ್ ಅವರು ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಹೀಗಾಗಿ ಅವರು ನೈತಿಕತೆ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಮತ್ತು ಬೇರೆಯವರಿಗೆ ತಮ್ಮ ಜವಾಬ್ದಾರಿಯನ್ನು ವಹಿಸಬೇಕು ಎಂದು ಆಗ್ರಹಿಸಿದರು.

ಜಾರಿ ನಿರ್ದೇಶನಾಲಯದ(ಇಡಿ) ಕಸ್ಟಡಿಯಲ್ಲಿದ್ದುಕೊಂಡೇ ಕೇಜ್ರಿವಾಲ್ ಅವರು ತಮ್ಮ ಸಚಿವರಿಗೆ ನಿರ್ದೇಶನ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ, ಮುಖ್ಯಮಂತ್ರಿಯೊಬ್ಬರು ಬಂಧನದಲ್ಲಿರುವಾಗ ಈ ರೀತಿ ನಿರ್ದೇಶನ ನೀಡಲು ಬರುವುದಿಲ್ಲ ಎಂದರು.

ಈ ಕುರಿತು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ದೂರು ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಜನರಿಗೆ ಔಷಧಿಗಳು ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಕೇಜ್ರಿವಾಲ್ ಅವರು ಇಡಿ ಕಸ್ಟಡಿಯಿಂದ ನಿರ್ದೇಶನಗಳನ್ನು ನೀಡಿದ್ದಾರೆ ಎಂದು ಆರೋಗ್ಯ ಸಚಿವ ಮತ್ತು ಎಎಪಿ ನಾಯಕ ಸೌರಭ್ ಭಾರದ್ವಾಜ್ ಮಂಗಳವಾರ ಹೇಳಿದ್ದಾರೆ.

SCROLL FOR NEXT