ನವದೆಹಲಿ: ರಾಷ್ಟ್ರ ರಾಜಧಾನಿಯ 8 ಆಸ್ಪತ್ರೆಗಳು ಹಾಗೂ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನುವಾರ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಇತ್ತೀಚಿಗೆ ದೆಹಲಿ ಎನ್ ಸಿಆರ್ ನ 150ಕ್ಕೂ ಹೆಚ್ಚು ಶಾಲೆಗಳಿಗೆ ಇದೇ ರೀತಿಯ ಬಾಂಬ್ ಬೆದರಿಕೆ ಬಂದಿತ್ತು. ಇದಾದ 11 ದಿನಗಳ ನಂತರ ಇದೀಗ ಆಸ್ಪತ್ರೆಗಳು ಹಾಗೂ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ.
ಮಧ್ಯಾಹ್ನ 3 ಗಂಟೆಗೆ ಬ್ರುರಾರಿ ಆಸ್ಪತ್ರೆಯಿಂದ ಬಾಂಬ್ ಬೆದರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಂತರ ನಗರದಾದ್ಯಂತ ಹಲವಾರು ಆಸ್ಪತ್ರೆಗಳಿಂದ ದೂರುಗಳು ಬಂದಿವೆ. ಕೂಡಲೇ ಎಚ್ಚೆತ್ತುಕೊಂಡಿರುವ ದೆಹಲಿ ಪೊಲೀಸರು, ಅಗ್ನಿಶಾಮಕ ದಳ, ಬಾಂಬ್ ಪತ್ತೆ ಮತ್ತು ನಿಷ್ಕ್ರೀಯ ದಳ, ಕ್ರೈಂ ಬ್ರಾಂಚ್ ಅಧಿಕಾರಿಗಳ ತಂಡ ಆಸ್ಪತ್ರೆಗೆ ತೆರಳಿ ಶೋಧ ಕಾರ್ಯ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಸ್ವೀಕರಿಸಿದ 2 ಗಂಟೆಗಳ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಭಾನುವಾರ ಸಂಜೆ 6-19ಕ್ಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಸಿಐಎಸ್ ಎಫ್ ಸಿಬ್ಬಂದಿ ಆಲರ್ಟ್ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಉಷಾ ರಂಗಾನಿ ಹೇಳಿದ್ದಾರೆ.
ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದ ನಂತರ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಹಿರಿಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದರು ಮತ್ತು ಶಾಲೆಗಳಿಗೆ ಭದ್ರತೆಯನ್ನು ಹೆಚ್ಚಿಸುವ, ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಮತ್ತು ಮತ್ತು ಶಾಲೆಗಳಿಗೆ ಬರುವ ಇಮೇಲ್‌ಗಳನ್ನು ನಿಯಮಿತವಾಗಿ ನಿಗಾವಣೆ ಮಾಡುವುದರ ಅಗತ್ಯವನ್ನು ಒತ್ತಿ ಹೇಳಿದರು. ಜೊತೆಗೆ ಭವಿಷ್ಯದಲ್ಲಿ ಅಂತಹ ಯಾವುದೇ ಘಟನೆಗಳನ್ನು ನಿರ್ವಹಿಸಲು ವಿವರವಾದ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ ಸೂಚಿಸಿದರು.