ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅನುಚಿತ, ನ್ಯಾಯಸಮ್ಮತವಲ್ಲದ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಹೈಕೋರ್ಟ್ ನ್ಯಾಯಾಧೀಶ ಮತ್ತು ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ ಚುನಾವಣಾ ಆಯೋಗ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಅಭಿಜಿತ್ ಗಂಗೋಪಾಧ್ಯಾಯ ಅವರು ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ತೃಣಮೂಲ ಕಾಂಗ್ರೆಸ್ ನೀಡಿದ್ದ ದೂರಿನ ಆಧಾರದ ಮೇಲೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.
ಮೇ 25 ರಂದು ಮತದಾನ ನಡೆಯಲಿರುವ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗಂಗೋಪಾಧ್ಯಾಯ ಅವರನ್ನು ಕಣಕ್ಕಿಳಿಸಲಾಗಿದೆ.
ಇಸಿ ತನ್ನ ನೋಟಿಸ್‌ನಲ್ಲಿ ಗಂಗೋಪಾಧ್ಯಾಯ ಅವರ ಹೇಳಿಕೆಯು "ಅಸಮರ್ಪಕ, ನ್ಯಾಯಸಮ್ಮತವಲ್ಲ. ಘನತೆಯನ್ನು ಮೀರಿ, ಕೆಟ್ಟ ಅಭಿರುಚಿಯಿಂದ ಹೇಳಿಕೆ ನೀಡಲಾಗಿದೆ" ಮತ್ತು ಮೇಲ್ನೋಟಕ್ಕೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಹೇಳಿದೆ.
ಮೇ 20ರ ಸಂಜೆ 5 ಗಂಟೆಯೊಳಗೆ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಬಿಜೆಪಿ ಅಭ್ಯರ್ಥಿಗೆ ಚುನಾವಣಾ ಆಯೋಗ ಸೂಚಿಸಿದೆ.