ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಶನಿವಾರ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಪೊಲೀಸ್ ಔಟ್‌ಪೋಸ್ಟ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶುಕ್ರವಾರ ಸಂಜೆಯಿಂದ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದು, "ತಕ್ಷಣವೇ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ" ಎಂದು ಗ್ರಾಮಸ್ಥರು ಹೇಳಿದ್ದಾರೆ.
ಇಂದು ಬೆಳಗ್ಗೆ ಜಯನಗರ ಪ್ರದೇಶದ ಜವುಗು ಭೂಮಿಯಿಂದ ಸ್ಥಳೀಯರು ಬಾಲಕಿಯ ಶವವನ್ನು ಹೊರತೆಗೆಯುತ್ತಿದ್ದಂತೆ, ಗುಂಪೊಂದು ಮಹಿಸ್ಮರಿ ಪೊಲೀಸ್ ಔಟ್‌ಪೋಸ್ಟ್‌ಗೆ ಬೆಂಕಿ ಹಚ್ಚಿ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಠಾಣೆ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗ್ರಾಮಸ್ಥರು ಪೊಲೀಸರ ವಿರುದ್ಧ ಭಾರಿ ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಈ ಪ್ರದೇಶಕ್ಕೆ ಹೆಚ್ಚಿನ ಪೊಲೀಸ್ ಪಡೆಯನ್ನು ಕಳುಹಿಸಲಾಗಿದೆ. SDPO ಮತ್ತು ಇತರ ಹಿರಿಯ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಉದ್ರಿಕ್ತ ಗುಂಪನ್ನು ಹತ್ತಿಕ್ಕಲು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ.
"ಬಾಲಕಿಯ ಕುಟುಂಬ ಸದಸ್ಯರು ಪ್ರದೇಶದ ಮಹಿಸ್ಮರಿ ಔಟ್‌ಪೋಸ್ಟ್‌ನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ದೂರಿನ ಮೇರೆಗೆ ತಕ್ಷಣ ಕ್ರಮ ಕೈಗೊಂಡಿಲ್ಲ" ಎಂದು ಸ್ಥಳೀಯರೊಬ್ಬರು ಆರೋಪಿಸಿದ್ದಾರೆ.
ಆಗಸ್ಟ್‌ನಲ್ಲಿ ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರ ಶವ ಪತ್ತೆಯಾದ ನಂತರ ಪೊಲೀಸರು ನಡೆದುಕೊಂಡ ರೀತಿಯೇ ಇಲ್ಲಿಯೂ ನಡೆದುಕೊಂಡಿದ್ದಾರೆ ಎಂದು ಇನ್ನೊಬ್ಬ ಗ್ರಾಮಸ್ಥರು ದೂರಿದ್ದಾರೆ.
“ನಮ್ಮ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಎಲ್ಲಾ ಆರೋಪಿಗಳನ್ನು ಬಂಧಿಸುವವರೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ದೂರಿಗೆ ತಡವಾಗಿ ಪ್ರತಿಕ್ರಿಯಿಸಿದವರ ವಿರುದ್ಧವೂ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸುತ್ತೇವೆ. ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿದ್ದರೆ, ಬಾಲಕಿಯನ್ನು ರಕ್ಷಿಸಬಹುದಿತ್ತು ಎಂದು ಗ್ರಾಮಸ್ಥರಾದ ಗಣೇಶ್ ಡೋಲುಯಿ ಅವರು ಹೇಳಿದ್ದಾರೆ.