ಮಧ್ಯಪ್ರದೇಶದ ಉಜ್ಜಯಿನಿಯ ಕಾಂಗ್ರೆಸ್ ನ ಮಾಜಿ ಕೌನ್ಸಿಲರ್ ಒಬ್ಬರನ್ನು ಅವರ ನಿವಾಸದಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೌನ್ಸಿಲರ್ ಹಾಜಿ ಕಲೀಂ ಖಾನ್ ಅಲಿಯಾಸ್ ಗುಡ್ಡು ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.
ಈ ಘಟನೆ ಉಜ್ಜಯಿನಿಯ ನೀಲಗಂಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿ ನೆಲೆಸಿರುವ ಹಾಜಿ ಕಲೀಂ ಖಾನ್ ಅಲಿಯಾಸ್ ಗುಡ್ಡು ಅವರ ಮನೆಯಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಗುಂಡು ಹಾರಿಸಲಾಗಿದೆ. ಹಾಜಿ ಕಲೀಂ ಖಾನ್ ಅವರಿಗೆ ಸುಮಾರು 60 ವರ್ಷ ವಯಸ್ಸಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಆತನ ತಲೆಗೆ ಗುಂಡು ತಗುಲಿದ್ದು, ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಪ್ರಕರಣದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದು, ಆತನ ಪತ್ನಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಕೆಲ ದಿನಗಳ ಹಿಂದೆಯೂ ಕಲೀಂ ಖಾನ್ನನ್ನು ಕೊಲೆ ಮಾಡಲು ಯತ್ನಿಸಲಾಗಿತ್ತು. ಆದರೆ ಆತ ಬದುಕುಳಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈಗ ಈ ವಿಷಯವನ್ನು ಹೆಚ್ಚು ಆಳವಾಗಿ ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತರ ಕುಟುಂಬದ ಇತರ ಸದಸ್ಯರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಜ್ಜಯಿನಿಯಲ್ಲಿ ನಡೆದ ಈ ಘಟನೆಯ ನಂತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಸೃಷ್ಟಿಸಿದೆ.