ನವದೆಹಲಿ: ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳಲ್ಲಿ ಬಾಂಬ್ ಬೆದರಿಕೆಯ ಪ್ರಕರಣದಲ್ಲಿ ದೆಹಲಿ ಪೊಲೀಸರು ಕ್ರಮಕೈಗೊಂಡಿದ್ದಾರೆ. ದೆಹಲಿ ಪೊಲೀಸರು 8 ಎಫ್‌ಐಆರ್‌ಗಳನ್ನು ದಾಖಲಿಸಿದ್ದು ವಿವಿಧ ವಿಮಾನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದಲ್ಲಿ ತನಿಖೆ ಆರಂಭಿಸಿದ್ದಾರೆ.
ಮೂಲಗಳ ಪ್ರಕಾರ, ಕಳೆದ ಎರಡು ದಿನಗಳಲ್ಲಿ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ವಿವಿಧ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದ ನಂತರ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿತ್ತು. ಈ ವಿಮಾನಗಳು ವಿವಿಧ ದೇಶಗಳು ಮತ್ತು ರಾಜ್ಯಗಳಿಗೆ ತೆರಳಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದಲ್ಲದೇ ಬುಧವಾರ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ಆಕಾಶ ಏರ್ ವಿಮಾನ ಪ್ರಕರಣದಲ್ಲೂ ಎಫ್ ಐಆರ್ ದಾಖಲಾಗಿದೆ. ದೆಹಲಿ ಐಜಿಐ ವಿಮಾನ ನಿಲ್ದಾಣ ಪೊಲೀಸರ ಪ್ರಕಾರ, ಇದುವರೆಗೆ 8 ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.
ಕಳೆದ ಎರಡು ದಿನಗಳಲ್ಲಿ, ಕೆಲವು ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ ಸುಮಾರು 12 ಭಾರತೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದು ನಂತರ ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಯಿತು. ಇನ್ನು ಕೆಲವನ್ನು ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಆದರೆ, ವಿಮಾನಗಳಲ್ಲಿ ಹುಡುಕಾಟ ನಡೆಸಿದಾಗ ಅನುಮಾನಾಸ್ಪದ ವಸ್ತು ಏನೂ ಪತ್ತೆಯಾಗಿಲ್ಲ. ಈ ಪ್ರಕರಣದಲ್ಲಿ ಎಫ್‌ಐಆರ್‌ಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಏತನ್ಮಧ್ಯೆ, ವಿವಿಧ ವಿಮಾನಯಾನ ಸಂಸ್ಥೆಗಳಿಂದ ಬಂದಿರುವ ಬಹು ಬೆದರಿಕೆಗಳ ವಿಷಯವನ್ನು ಬುಧವಾರ ಸಂಸದೀಯ ಸಮಿತಿಯ ಮುಂದೆ ಪ್ರಸ್ತಾಪಿಸಲಾಯಿತು. ಆರೋಪಿಗಳನ್ನು ಗುರುತಿಸಲಾಗುತ್ತಿದೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ ತಿಳಿಸಿದರು.