ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸಿಬಿಐನಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಕಟಿಸಲಿದೆ.
ಜಾಮೀನು ಕೋರಿ ಮತ್ತು ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಾಳೆ ತೀರ್ಪು ಪ್ರಕಟಿಸಲಿದೆ.
ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಸೆಪ್ಟೆಂಬರ್ 13 ರ ಪಟ್ಟಿಯ ಪ್ರಕಾರ, ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ, ಕೇಜ್ರಿವಾಲ್ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಲು ನಿರ್ಧರಿಸಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಮತ್ತು ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ವಾದವನ್ನು ಆಲಿಸಿದರು.
ವಕೀಲರು ತಮ್ಮ ವಾದವನ್ನು ಮುಕ್ತಾಯಗೊಳಿಸಿದ ನಂತರ ಸೆಪ್ಟೆಂಬರ್ 5 ರಂದು "ತೀರ್ಪನ್ನು ಕಾಯ್ದಿರಿಸಲಾಗಿದೆ" ಎಂದು ಪೀಠ ಹೇಳಿತ್ತು.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಜೂನ್ 26 ರಂದು ಬಂಧಿಸಿತ್ತು. ಆಗಸ್ಟ್ 5 ರಂದು ಸಿಬಿಐ ಕ್ರಮವನ್ನು ಎತ್ತಿ ಹಿಡಿದಿದ್ದ ದೆಹಲಿ ಹೈಕೋರ್ಟ್, ಮುಖ್ಯಮಂತ್ರಿಯ ಬಂಧನ ಕಾನೂನುಬದ್ಧವೆಂದು ಹೇಳಿತ್ತು.