ಪಾಟ್ನಾ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT) ಪಾಟ್ನಾದ ವಿದ್ಯಾರ್ಥಿನಿ ರಾಜಧಾನಿಯ ಹೊರವಲಯ ಬಿಹ್ತಾದಲ್ಲಿರುವ ಕ್ಯಾಂಪಸ್‌ನ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿನಿಯಾಗಿದ್ದು, ಆಕೆಯ ಶವ ಹಾಸ್ಟೆಲ್ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಕೂಡ ಸಿಕ್ಕಿದೆ.
ಮೊನ್ನೆ ಶುಕ್ರವಾರ ರಾತ್ರಿ 10.15ರ ಸುಮಾರಿಗೆ ಪೊಲೀಸರಿಗೆ ಕರೆ ಬಂದಿದ್ದು, ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್ ಕೊಠಡಿಯೊಳಗೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಹಿತಿ ನೀಡಿದರು. ಪೊಲೀಸರು ಅಲ್ಲಿಗೆ ತಲುಪಿ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಅಲ್ಲಿ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವಿದ್ಯಾರ್ಥಿನಿ ಪೋಷಕರು ಆಂಧ್ರ ಪ್ರದೇಶದಲ್ಲಿದ್ದು, ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಸ್ಥಳದಿಂದ ಎಲ್ಲ ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವಿದ್ಯಾರ್ಥಿನಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಕ್ಯಾಂಪಸ್‌ನ ಹೊರಗೆ ಜಮಾಯಿಸಿ ಸಂಸ್ಥೆಯ ಆಡಳಿತ ವಿರುದ್ಧ ಘೋಷಣೆಗಳನ್ನು ಕೂಗಿದರು.