ಮುಂಬೈ: ಸುದೀರ್ಘ ವಿರಾಮದ ನಂತರ ಬುಧವಾರ ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ದೇಶದ ವಾಣಿಜ್ಯ ನಗರಿ ಮತ್ತು ಅದರ ನೆರೆಯ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
"ಮುಂಬೈನಲ್ಲಿ ಭಾರೀ ಮಳೆಯಾಗಲಿದೆ" ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹವಾಮಾನ ವೈಪರೀತ್ಯದಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ ಹಲವು ಕಡೆ ಇಂದು ಮಧ್ಯಾಹ್ನದಿಂದ ಭಾರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಭಾರೀ ಸಂಚಾರ ದಟ್ಟಣೆ ಉಂಟಾಗಿದ್ದು, ಮಳೆಯಿಂದಾಗಿ ಸ್ಥಳೀಯ ರೈಲು ಸಂಚಾರವೂ ವಿಳಂಬವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮುಂಬೈ, ಥಾಣೆ, ರಾಯಗಡ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯು ಸೆಪ್ಟೆಂಬರ್ 26 ರಂದು ಪಾಲ್ಘರ್‌ಗೆ ರೆಡ್ ಅಲರ್ಟ್ ಹಾಗೂ ಥಾಣೆ, ರಾಯಗಡ, ಮುಂಬೈ ಮತ್ತು ಪುಣೆಗೆ ಅರೆಂಜ್ ಅಲರ್ಟ್ ಘೋಷಿಸಿದೆ.
ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
IMD ಭಾರೀ ಮಳೆಯ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಮುಂಬೈನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಬುಧವಾರ ಪ್ರಕಟಿಸಿದೆ.