ಉಜ್ಜಯಿನಿ: ಶುಕ್ರವಾರ ಸಂಜೆ ಸುರಿದ ಭಾರಿ ಮಳೆಗೆ ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನದ ಎದುರಿನ ಮಹಾರಾಜವಾಡ ಶಾಲೆಯ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾಲ್ಕು ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಉಜ್ಜಯಿನಿ ಕಲೆಕ್ಟರ್ ನೀರಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ದೇವಸ್ಥಾನದಲ್ಲಿ ಸಂಜೆಯ ಆರತಿಗೆ ಮುನ್ನವೇ ಈ ಅವಘಡ ಸಂಭವಿಸಿದೆ. ಗೋಡೆ ಕುಸಿತದಲ್ಲಿ ಓರ್ವ ಪುರುಷ ಮತ್ತು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಗಾಯಗೊಂಡ ಇಬ್ಬರು ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಇಂದೋರ್‌ನ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಿಂಗ್ ಹೇಳಿದರು.