ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಬುಧವಾರ ತೀರ್ಪು ಕಾಯ್ದಿರಿಸಿದೆ ಮತ್ತು ಅಲ್ಲಿಯವರೆಗೆ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೇಳಿದೆ.
ಎರಡೂ ಕಡೆಯ ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳಾದ ಎಸ್ ಕೊತ್ವಾಲ್ ಮತ್ತು ಎಸ್ ಮೋದಕ್ ಅವರ ವಿಭಾಗೀಯ ಪೀಠ, ತನ್ನ ಆದೇಶವನ್ನು ಕಾಯ್ದಿರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸುವವರೆಗೆ ಹಾಸ್ಯನಟನನ್ನು ಬಂಧಿಸದಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.
ಮುಂಬೈನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅಪಹಾಸ್ಯ ಮಾಡಿದ 36 ವರ್ಷದ ಕಾಮ್ರಾ ಅವರ ವಿರುದ್ಧ ಮುಂಬೈ ಉಪನಗರದ ಖಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಶಿವಸೇನಾ ಶಾಸಕರ ದೂರಿನ ಮೇರೆಗೆ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಮತ್ತು ಇತರ ಪೊಲೀಸ್ ಠಾಣೆಗಳಲ್ಲಿಯೂ ಅವರ ವಿರುದ್ಧ ಕೇಸ್ ಗಳನ್ನು ದಾಖಲಿಸಲಾಗಿದೆ.
ತಮಿಳುನಾಡು ನಿವಾಸಿಯಾದ ಕಾಮ್ರಾ ಅವರು ಕಳೆದ ತಿಂಗಳು ಈ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.