ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬುಧವಾರ ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಏಪ್ರಿಲ್ 9 ರಂದು ಆರೋಪಪಟ್ಟಿ ಸಲ್ಲಿಸಿರುವುದಾಗಿ ಜಾರಿ ನಿರ್ದೇಶನಾಲಯ ಹೇಳಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಲ್ಲದೆ, ಆರೋಪಪಟ್ಟಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಸ್ಯಾಮ್ ಪಿತ್ರೋಡಾ ಮತ್ತು ಸುಮನ್ ದುಬೆ ಅವರನ್ನೂ ಕೂಡ ಆರೋಪಿಗಳಾಗಿ ಹೆಸರಿಸಲಾಗಿದೆ.
ಪ್ರತಿಭಟನೆಯಲ್ಲಿ ಹಾಜರಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದರು. ಇದು ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ನ್ನು ಗುರಿಯಾಗಿಸುವ ಪ್ರಯತ್ನ ಎಂದು ಕರೆದರು.
ಕಳೆದ 12 ವರ್ಷಗಳಲ್ಲಿ ಏನೂ ನಡೆದಿಲ್ಲ, ಇದು 12 ವರ್ಷಗಳ ಹಳೆಯ ಪ್ರಕರಣ. ಇಲ್ಲಿ ಒಂದೇ ಒಂದು ಪೈಸೆ ವಿನಿಮಯವಾಗದ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದ್ದಾರೆ. ವಾಸ್ತವವೆಂದರೆ ಸರ್ಕಾರ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಇದರ ವಿರುದ್ಧ ನಾವು ಹೋರಾಟ ನಡೆಸುತ್ತೇವೆ ಎಂದು ಶ್ರೀನಾಟೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ, ಇದು ಅಕ್ರಮ ಹಣ ವರ್ಗಾವಣೆ ಮತ್ತು ಅಪರಾಧಕ್ಕೆ ಶಿಕ್ಷೆಯ ಬಗ್ಗೆ ವಿಚಾರಣೆ ನಡೆಸುತ್ತದೆ.
ನ್ಯಾಷನಲ್ ಹೆರಾಲ್ಡ್ ಮತ್ತು ಅದರ ಪ್ರಕಾಶಕ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಗೆ ಸಂಬಂಧಿಸಿದ 661 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯವು ಕ್ರಮಗಳನ್ನು ಪ್ರಾರಂಭಿಸಿದ ಕೇವಲ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.