ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 26 ಪ್ರವಾಸಿಗರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ ಬುಧವಾರ ಕುಲ್ಗಾಮ್ ಜಿಲ್ಲೆಯಲ್ಲಿ ಶಂಕಿತ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯ ತಂಗ್ಮಾರ್ಗ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
ಈ ವೇಳೆ ಭಯೋತ್ಪಾದಕರು ಭದ್ರತಾ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ ನಂತರ ಎನ್‌ಕೌಂಟರ್ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಯಿತು ಮತ್ತು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಪಹಲ್ಗಾಮ್‌ನಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ ನಂತರ ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರ ವಹಿಸಿವೆ.