ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಆಪರೇಷನ್ 'ಅಖಾಲ್ ಆಪರೇಷನ್' ಅಡಿಯಲ್ಲಿ ಇನ್ನಿಬ್ಬರು ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಚಿನಾರ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಈ ಭಯೋತ್ಪಾದಕರು ನಿಷೇಧಿತ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ನೊಂದಿಗೆ ನಂಟು ಹೊಂದಿದ್ದಾರೆ. ಇತ್ತೀಚಿಗೆ ನಡೆದ ಪಹಲ್ಗಾಮ್ ದಾಳಿಯಲ್ಲಿಯೂ ತೊಡಗಿಸಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಉಗ್ರರ ಚಲನವಲನಗಳ ಬಗ್ಗೆ ದೊರೆತ ಗುಪ್ತಚರ ಮಾಹಿತಿ ನಂತರ ಭಾರತೀಯ ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ಎನ್‌ಕೌಂಟರ್ ಆರಂಭವಾಗಿದೆ.
ಭಯೋತ್ಪಾದಕರು ಶ್ರೀನಗರ ಸಮೀಪದ ದಚಿಗಮ್ ರಾಷ್ಟ್ರೀಯ ಉದ್ಯಾನವನದಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ದೊರಕಿದೆ. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿದ್ದು, ಉಳಿದ ಇಬ್ಬರು ಉಗ್ರರನ್ನು ಹೊಡೆದುಹಾಕಲು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಪರೇಷನ್ ಮಹಾದೇವ್ ಕಾರ್ಯಾಚರಣೆಯ ಕೆಲ ದಿನಗಳ ಬಳಿಕ ಈಗ ಅಖಾಲ್ ಆಪರೇಷನ್ ನಡೆಯುತ್ತಿದೆ. ಆಪರೇಷನ್ ಮಹಾದೇವ್ ಕಾರ್ಯಾಚರಣೆಯಲ್ಲಿ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸುಲೇಮಾನ್ ಸೇರಿದಂತೆ ಮೂವರು ಉಗ್ರರನ್ನು ಹತ್ಯೆಗೈಯಲಾಗಿತ್ತು.