ಕ್ಯಾಚಾರ್: ಕೆಲವು ಗಡಿ ಭದ್ರತಾ ಪಡೆ (BSF)ಸಿಬ್ಬಂದಿಯಿಂದ ಥಳಿಸಲ್ಪಟ್ಟ 30 ವರ್ಷದ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ನಡೆದಿದೆ. ಇದರಿಂದ ರೊಚಿಗೆದ್ದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಭಾರತ-ಬಾಂಗ್ಲಾದೇಶ ಗಡಿಯಾದ ಕಟಿಗೋರಾದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.
ಮೃತನನ್ನು ಗಡಿ ಪ್ರದೇಶ ಅಮ್ಟೋಲಿ ಗ್ರಾಮದ ನಿರ್ಮೋಲ್ ನಾಮಸೂದ್ರ ಎಂದು ಗುರುತಿಸಲಾಗಿದೆ. ಬಿಎಸ್ಎಫ್ ಯೋಧರಿಂದ ತೀವ್ರವಾಗಿ ಥಳಿಸಲ್ಪಟ್ಟ ನಂತರ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಟಿಗೋರಾದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಕೆಲವು ಕ್ರಮಗಳನ್ನು ತೆಗೆದುಕೊಂಡಿದ್ದರೂ, ಸ್ಥಳೀಯರು ಸರ್ಕಲ್ ಕಚೇರಿಯಲ್ಲಿ ಜಮಾಯಿಸಿ ಬಿಎಸ್ಎಫ್ ಸಿಬ್ಬಂದಿ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರಿಂದ ಉದ್ವಿಗ್ನತೆ ಉಂಟಾಗಿತ್ತು
ಆದರೆ, ಮೃತರ ಕುಟುಂಬದಿಂದ ಯಾವುದೇ ದೂರು ದಾಖಲಾಗಿಲ್ಲ ಮತ್ತು ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಆರೋಪದ ಬಗ್ಗೆ ಗಡಿ ಭದ್ರತಾ ಪಡೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.