ನವದೆಹಲಿ: ರಾಷ್ಟ್ರ ರಾಜಧಾನಿಯ ಆಸ್ಪತ್ರೆಯೊಂದರಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಪೂರ್ವ ದೆಹಲಿಯ ಆನಂದ್ ವಿಹಾರ್ ಪ್ರದೇಶದಲ್ಲಿರುವ ಕಾಸ್ಮೋಸ್ ಆಸ್ಪತ್ರೆಯಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 12.12 ಕ್ಕೆ ಬೆಂಕಿಯ ಬಗ್ಗೆ ಕರೆ ಬಂದಿದೆ. ತದನಂತರ ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಆಸ್ಪತ್ರೆಯ ನೆಲ ಮಹಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.
ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆ ಅಧಿಕಾರಿ ಅಶೋಕ್ ಕುಮಾರ್ ಜೈಸ್ವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆಯೇ ರೋಗಿಗಳನ್ನು ಸಮೀಪದ ಪುಷ್ಪಾಂಜಲಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 11 ಮಂದಿಯನ್ನು ರಕ್ಷಿಸಲಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.