ಕಿಶ್ತ್ವಾರ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಡೂರ್ ಪ್ರದೇಶದಲ್ಲಿ ಭಾರತೀಯ ಸೇನೇ ಪಡೆ ಎನ್ಕೌಂಟರ್ ಆರಂಭಿಸಿದ್ದು, ಸ್ಥಳದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ.
ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು.
ಇದರ ಬೆನ್ನಲ್ಲೇ ಕಿಶ್ತ್ವಾರ್‌ನ ಗುಡ್ಡಗಾಡು ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಸ್ಥಳದಲ್ಲಿ ಇಂದು ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರ ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದಾರೆ.
ಕೂಡಲೇ ಸೇನಾಪಡೆ ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿದ್ದು, ಸ್ಥಳವನ್ನು ಸುತ್ತುವರೆದು ಉಗ್ರರ ಸದೆಬಡಿಯಲು ಎನ್ಕೌಂಟರ್ ಆರಂಭಿಸಿದೆ ಎಂದು ತಿಳಿದುಬಂದಿದೆ.
ಈ ಕುರಿತು ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್'ನಲ್ಲಿ ಪೋಸ್ಟ್ ಮಾಡಿ, ಪ್ರಸ್ತುತ ಬೆಳವಣಿಗೆಯನ್ನು ದೃಢಪಡಿಸಿದೆ.
ಗುಪ್ತಚರ ಆಧಾರಿತ ಕಾರ್ಯಾಚರಣೆಯ ಸಮಯದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರೊಂದಿಗೆ ಸಂಪರ್ಕವನ್ನು ಸಾಧಿಸಿದ್ದು, ಸ್ಥಳದಲ್ಲಿ ಎನ್‌ಕೌಂಟರ್ ಮುಂದುವರೆದಿದೆ ಎಂದು ಹೇಳಿದೆ.