ಹೈದರಾಬಾದ್: ದೇವಸ್ಥಾನ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ತಡೆಗಟ್ಟುವ ಕ್ರಮವಾಗಿ ಮಂಗಳವಾರ ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್. ರಾಮಚಂದರ್ ರಾವ್ ಅವರನ್ನು ಹಲವು ಗಂಟೆಗಳ ಕಾಲ ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ತಿಂಗಳು ಕೆಡವಲಾದ ಬಂಜಾರ ಹಿಲ್ಸ್‌ನಲ್ಲಿರುವ ಪೆದ್ದಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲು ಕೆಲವು ಹಿಂದೂ ಸಂಘಟನೆಗಳು ಕರೆ ನೀಡಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೆ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಗೃಹಬಂಧನಲ್ಲಿ ಇರಿಸಲಾಯಿತು ಎಂದು ಅವರು ಹೇಳಿದ್ದಾರೆ.
ದೇವಾಲಯ ತೆರವು ವಿರೋಧಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ತಮ್ಮನ್ನು ಗೃಹಬಂಧನದಲ್ಲಿ ಇರಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರಾಮಚಂದರ್ ರಾವ್, ನಿಜಾಮ್ ಆಳ್ವಿಕೆಯಲ್ಲಿ ನಡೆದ ದಬ್ಬಾಳಿಕೆಯನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಪ್ರಸ್ತುತ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ನೋಡುತ್ತಿದ್ದೇವೆ ಎಂದು ಆರೋಪಿಸಿದರು.