ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಬುಧವಾರ ಬೀದಿ ನಾಯಿಗಳಿಗೆ ಸಂಬಂಧಿಸಿದ ಪ್ರಕರಣವನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿದ್ದಾರೆ.
ದೆಹಲಿ ಮತ್ತು ರಾಷ್ಟ್ರ ರಾಜಧಾನಿಯ ಸುತ್ತಮುತ್ತಲಿನ ಪ್ರದೇಶಗಳ ಬೀದಿ ನಾಯಿಗಳನ್ನು ಹಿಡಿದು, ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ತುರ್ತು ವಿಚಾರಣೆಗೆ ಉಲ್ಲೇಖಿಸಿದ್ದ ಮುಖ್ಯ ನ್ಯಾಯಮೂರ್ತಿಗಳು, ಈ ವಿಷಯವನ್ನು ಪರಿಶೀಲಿಸುವುದಾಗಿ ಹೇಳಿದ್ದರು. ಅದರಂತೆ ಈಗ ಪ್ರಕರಣವನ್ನು ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿದ್ದಾರೆ.
ಆಗಸ್ಟ್ 11 ರಂದು, ಸುಪ್ರೀಂ ಕೋರ್ಟ್, ಬೀದಿನಾಯಿ ಕಡಿತದಿಂದಾಗಿ, ವಿಶೇಷವಾಗಿ ಮಕ್ಕಳಲ್ಲಿ ರೇಬಿಸ್ ಹೆಚ್ಚಾದ ಕಾರಣದಿಂದಾಗಿ ದೆಹಲಿ-ಎನ್‌ಸಿಆರ್ ಅಧಿಕಾರಿಗಳಿಗೆ, ಬೀದಿಗಳಿಂದ ಎಲ್ಲಾ ಬೀದಿನಾಯಿಗಳನ್ನು "ಆದಷ್ಟು ಬೇಗ" ಶಾಶ್ವತವಾಗಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ನಿರ್ದೇಶಿಸಿತ್ತು. ಆರರಿಂದ ಎಂಟು ವಾರಗಳಲ್ಲಿ ಸುಮಾರು 5,000 ನಾಯಿಗಳಿಗೆ ಆಶ್ರಯಗಳನ್ನು ರಚಿಸುವ ಮೂಲಕ ಪ್ರಾರಂಭಿಸಲು ದೆಹಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.
ಇದಲ್ಲದೆ, ನಾಯಿಗಳ ಸ್ಥಳಾಂತರ ಕಾರ್ಯಾಚರಣೆ ವೇಳೆ ಯಾವುದೇ ರೀತಿಯ ಅಡಚಣೆ ಉಂಟಾದರೆ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನ್ಯಾಯಪೀಠ ಎಚ್ಚರಿಸಿತ್ತು.