ನವದೆಹಲಿ: 'ಮತ ಕಳ್ಳತನʼ ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸಂಸತ್ತಿನಲ್ಲಿ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಮತ ಕಳ್ಳತನದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದೆ.
ಈ ಮಧ್ಯೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೋಷಾರೋಪಣೆ ಮಾಡಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಡಿಯಾ (I.N.D.I.A) ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕರೊಬ್ಬರು, ಇಂಡಿಯಾ ಮೈತ್ರಿಕೂಟದ ಎಲ್ಲಾ ಸದಸ್ಯರು ಈ ಪ್ರಸ್ತಾಪವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ಕಾನೂನು ವಿಧಾನಗಳ ಕುರಿತು ಶೀಘ್ರದಲ್ಲೇ ಚರ್ಚೆ ನಡೆಯಲಿದೆ. ಈ ಪ್ರಕ್ರಿಯೆಯು ನ್ಯಾಯಾಧೀಶರ ಮಹಾಭಿಯೋಗದಂತೆಯೇ ಇರಲಿದೆ ಎಂದು ಹೇಳಿದ್ದಾರೆ.
ಏತನ್ಮಧ್ಯೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನ, ಪರಿಣಾಮದ ಕುರಿತು ಲೋಕಸಭೆಯಲ್ಲಿ 2 ದಿನಗಳಕಾಲ ವಿಶೇಷ ನಡೆಯಲಿದ್ದು, ಈ ವಿಶೇಷ ಚರ್ಚೆಯಲ್ಲಿ ಸರ್ಕಾರದೊಂದಿಗೆ ಸಹಕರಿಸದಿರಲು ವಿರೋಧ ಪಕ್ಷಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ.
ವಿಶೇಷ ಚರ್ಚೆಯಲ್ಲಿ ಭಾಗವಹಿಸದಿರಲು ಮತ್ತು ಪ್ರತಿಭಟನೆಗಳನ್ನು ಮುಂದುವರಿಸಲು ನಿರ್ಧರಿಸಿದ್ದೇವೆಂದು ವಿಪಕ್ಷಗಳ ನಾಯಕರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರ ಮತ ಕಳವು ಆರೋಪದ ನಂತರ, ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸುವ ಮೂಲಕ ಪ್ರತಿಕ್ರಿಯಿಸಿತ್ತು. ಈ ಮೂಲಕ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿತ್ತು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ‘ಮತ ಕಳವು’ ಆರೋಪ ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ವಿರೋಧ ಪಕ್ಷದ ನಿರಂತರ ಪ್ರತಿಭಟನೆಯ ನಡುವೆ, ಚುನಾವಣಾ ಆಯೋಗ (ಇಸಿಐ) ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯೆಯನ್ನು ನೀಡಿತ್ತು.
ಎಸ್‌ಐಆರ್ ನಂತರ ಬಿಹಾರದ ಕರಡು ಮತದಾರರ ಪಟ್ಟಿಯಿಂದ ಅಳಿಸಲಾದ ಹೆಸರುಗಳ ಪಟ್ಟಿಯನ್ನು ಸುಪ್ರೀಂ ಕೋರ್ಟ್ ಆದೇಶದ ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ 56 ಗಂಟೆಗಳ ಒಳಗೆ, ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸದ ಮತದಾರರ ಹೆಸರನ್ನು ಜಿಲ್ಲೆಗಳ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡಲಾಗಿದೆ.
ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯನ್ನು ತರಾತುರಿಯಲ್ಲಿ ಮಾಡಲಾಗಿದೆ ಎಂಬುದು ಒಂದು ಕಟ್ಟು ಕಥೆಯಷ್ಟೇ. ಪ್ರತಿ ಚುನಾವಣೆಗೂ ಮೊದಲು ಮತದಾರರ ಪಟ್ಟಿಯನ್ನು ಸರಿಪಡಿಸುವುದು ಚುನಾವಣಾ ಆಯೋಗದ ಕಾನೂನುಬದ್ಧ ಕರ್ತವ್ಯ. ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ನಡುವೆ ತಾರತಮ್ಯ ಮಾಡಲು ಸಾಧ್ಯವಿಲ್ಲ ಮತ್ತು ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ಚುನಾವಣಾ ಪ್ರಾಧಿಕಾರಕ್ಕೆ ಸಮಾನವಾಗಿವೆ ಎಂದು ಹೇಳಿದ್ದರು.
ಮತದಾರರ ಪಟ್ಟಿಯಲ್ಲಿ ಅಕ್ರಮಗಳ ಆರೋಪದ ಕುರಿತು ಕಾಂಗ್ರೆಸ್ ನಾಯಕರು ಏಳು ದಿನಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು, ಇಲ್ಲದಿದ್ದರೆ ಅವರ ಮತ ಕಳ್ಳತನದ ಆರೋಪಗಳನ್ನು ಆಧಾರರಹಿತ ಮತ್ತು ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದರು.