ನವದೆಹಲಿ: ಇಂದಿನಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ನಿರ್ಧರಿಸಿದೆ.
ರಾಷ್ಟ್ರೀಯ ಭದ್ರತೆ, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ರಾಷ್ಟ್ರ ರಾಜಧಾನಿಯ ವಾಯು ಮಾಲಿನ್ಯ ಮುಂತಾದ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯತಂತ್ರ ರೂಪಿಸಿದೆ.
ಆದಾಗ್ಯೂ, ಇಂದು ಬೆಳಿಗ್ಗೆ ಇಂಡಿಯಾ ಬಣದ ನಾಯಕರ ಜೊತೆಗಿನ ಚರ್ಚೆಯ ನಂತರ ಪಕ್ಷ ಅಧಿವೇಶನದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ.
ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಭಾನುವಾರ ಸಂಜೆ ನಡೆದ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಗುಂಪಿನ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.