ಲಕ್ನೋ: ನಿಲ್ಲಿಸಿದ್ದ ಟ್ರಕ್ ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರು ಬದುಕುಳಿಯುವ ಯಾವುದೇ ಅವಕಾಶವಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತಕ್ಕೆ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗಿದೆ.
ಮೃತ ನಾಲ್ವರು ವೆಂಕಟೇಶ್ವರ ವಿಶ್ವವಿದ್ಯಾಲಯದ ಎಂಬಿಬಿಎಸ್ ವಿದ್ಯಾರ್ಥಿಗಳು ಎಂದು ಹೇಳಲಾಗುತ್ತಿದೆ. ವಿಶ್ವವಿದ್ಯಾಲಯದ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.
ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ವಿಧಿವಿಜ್ಞಾನ ತಂಡಗಳು ಮತ್ತು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.