ನವದೆಹಲಿ: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ನೈಟ್‌ಕ್ಲಬ್‌ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನಗೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಸಂತಾಪ ಸೂಚಿಸಿದ್ದಾರೆ ಮತ್ತು ಈ ವಿಷಯದಲ್ಲಿ 'ಸಂಪೂರ್ಣ ಮತ್ತು ಪಾರದರ್ಶಕ' ತನಿಖೆಗೆ ಆಗ್ರಹಿಸಿದ್ದಾರೆ.
ಈ ವಿಷಯದ ಬಗ್ಗೆ ರಾಜ್ಯ ಸರ್ಕಾರವನ್ನು ಖಂಡಿಸಿದ ಲೋಕಸಭೆ ಸದಸ್ಯ, ಇದು ಸುರಕ್ಷತೆ ಮತ್ತು ಆಡಳಿತದ 'ಕ್ರಿಮಿನಲ್ ವೈಫಲ್ಯ' ಎಂದು ಕರೆದರು.
'ಗೋವಾದ ಅರ್ಪೋರಾದಲ್ಲಿ 20ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಭೀಕರ ಬೆಂಕಿ ದುರಂತದಿಂದ ತೀವ್ರ ನೋವುಂಟಾಗಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಇದು ಕೇವಲ ಅಪಘಾತವಲ್ಲ, ಸುರಕ್ಷತೆ ಮತ್ತು ಆಡಳಿತದ ಕ್ರಿಮಿನಲ್ ವೈಫಲ್ಯ. ಸಂಪೂರ್ಣ, ಪಾರದರ್ಶಕ ತನಿಖೆ ನಡೆಯಬೇಕು ಮತ್ತು ಅಂತಹ ತಡೆಗಟ್ಟಬಹುದಾದ ದುರಂತಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಬೇಕು' ಎಂದು ರಾಹುಲ್ ಗಾಂಧಿ X ನಲ್ಲಿನ ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಸಾವಿಗೀಡಾಗಿದ್ದು, ಅವರಲ್ಲಿ ನಾಲ್ವರು ಪ್ರವಾಸಿಗರು ಮತ್ತು ಹದಿನಾಲ್ಕು ಮಂದಿ ಸಿಬ್ಬಂದಿ ಎಂದು ಗುರುತಿಸಲಾಗಿದೆ. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ದಿವೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅಧಿಕಾರಿಗಳು ರಾತ್ರಿಯಿಡೀ ಶ್ರಮಿಸಿದ್ದಾರೆ.
ಇದಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದರು. ಗಾಯಾಳುಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) 50,000 ರೂ. ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.