ಹೈದರಾಬಾದ್: ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಬಾಲಕನನ್ನು ಆತನ ತಂದೆಯೇ ಹೊಡೆದು ಕೊಂದಿರುವ ಧಾರುಣ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ ಒಂಬತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ನಡೆದಿದೆ.
ತಡವಾಗಿ ಮನೆಗೆ ಬಂದಿದ್ದಕ್ಕೆ ತಂದೆ ಆತನನ್ನು ಪ್ರಶ್ನಿಸಿದ್ದಾರೆ. ನಂತರ ಆತ ಬಾಲಕನ ಎದೆಗೆ ಬಲವಾಗಿ ಗುದ್ದಿದ್ದಾನೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಚೌಟುಪ್ಪಲ್ ಪೊಲೀಸರು ತಿಳಿಸಿದ್ದಾರೆ.
ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆತ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ. ಘಟನೆಯ ವೇಳೆ ಆರೋಪಿ ಕುಡಿದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.