ಯಮುನಾ ನದಿಯಲ್ಲಿ ಕಸದ ಸ್ಕಿಮ್ಮರ್ ಸ್ವಚ್ಛತಾ ಕಾರ್ಯಾಚರಣೆ ನಡೆಸುತ್ತಿರುವುದು  
ದೇಶ

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿ ಕೊಟ್ಟ ಭರವಸೆಯಂತೆ ಯಮುನಾ ನದಿ ಶುದ್ಧೀಕರಣ ಕಾರ್ಯ ಆರಂಭ

ಸ್ವಚ್ಛತಾ ಕಾರ್ಯದಲ್ಲಿ ನದಿಯಿಂದ ಹೂಳು, ಕಸ ತೆಗೆಯುವುದು, ನಜಾಫ್‌ಗಢ ನಾಲೆ, ಪೂರಕ ನಾಲೆ ಮತ್ತು ಇತರ ಪ್ರಮುಖ ನಾಲೆಗಳಲ್ಲಿ ಏಕಕಾಲದಲ್ಲಿ ಶುಚಿಗೊಳಿಸುವ ಕಾರ್ಯಗಳನ್ನು ಒಳಗೊಂಡಿರುತ್ತದೆ.

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಸೋಲಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಆಯ್ಕೆಯಾಗಿ ಸರ್ಕಾರ ರಚನೆ ಇನ್ನೂ ಆಗಿಲ್ಲ. ಈ ಸಂದರ್ಭದಲ್ಲಿ ಯಮುನಾ ನದಿಯನ್ನು ಮಾಲಿನ್ಯದಿಂದ ಮುಕ್ತಗೊಳಿಸುವ ನಾಲ್ಕು ಹಂತದ ಕಾರ್ಯತಂತ್ರವನ್ನು ಆಧರಿಸಿ ಯಮುನಾ ನದಿಯ ಶುದ್ಧೀಕರಣ ಕಾರ್ಯ ಆರಂಭವಾಗಿದೆ.

ನದಿಯಿಂದ ಕಸ ತೆಗೆಯುವ ಯಂತ್ರಗಳು, ಕಳೆ ಕೊಯ್ಲು ಯಂತ್ರಗಳು, ಹೂಳೆತ್ತುವ ಸಾಧನಗಳು ಮತ್ತು ಡ್ರೆಡ್ಜರ್‌ನೊಂದಿಗೆ ಯಮುನಾ ನದಿಯನ್ನು ಸ್ವಚ್ಛಗೊಳಿಸುವ ಕೆಲಸ ಪ್ರಾರಂಭವಾಗಿದೆ ಎಂದು ರಾಜ್ ನಿವಾಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಫೆಬ್ರವರಿ 8 ರಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಲಿನ್ಯ ಮುಕ್ತ ಯಮುನಾಗೆ ಎಲ್ಲ ಪ್ರಯತ್ನಗಳನ್ನು ಮಾಡುವುದಾಗಿ ಭರವಸೆ ನೀಡಿದ್ದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಮೊನ್ನೆ ಶನಿವಾರ ಮುಖ್ಯ ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ನೀರಾವರಿ ಮತ್ತು ಪ್ರವಾಹ ನಿಯಂತ್ರಣ) ಅವರನ್ನು ಭೇಟಿ ಮಾಡಿ ಯಮುನಾ ನದಿ ಶುಚಿಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇಶಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಮುನಾ ನದಿ ಸ್ವಚ್ಛತೆಗೆ ನಾಲ್ಕು ಹಂತದ ಕಾರ್ಯತಂತ್ರ

ಸ್ವಚ್ಛತಾ ಕಾರ್ಯದಲ್ಲಿ ನದಿಯಿಂದ ಹೂಳು, ಕಸ ತೆಗೆಯುವುದು, ನಜಾಫ್‌ಗಢ ನಾಲೆ, ಪೂರಕ ನಾಲೆ ಮತ್ತು ಇತರ ಪ್ರಮುಖ ನಾಲೆಗಳಲ್ಲಿ ಏಕಕಾಲದಲ್ಲಿ ಶುಚಿಗೊಳಿಸುವ ಕಾರ್ಯಗಳನ್ನು ಒಳಗೊಂಡಿರುತ್ತದೆ. ಈ ಕಾರ್ಯತಂತ್ರವು ಈಗಿರುವ ಒಳಚರಂಡಿ ಸಂಸ್ಕರಣಾ ಘಟಕಗಳ ಸಾಮರ್ಥ್ಯ ಮತ್ತು ಉತ್ಪಾದನೆಯ ದೈನಂದಿನ ಮೇಲ್ವಿಚಾರಣೆಯನ್ನು ಒಳಗೊಂಡಿರುತ್ತದೆ. ದಿನಕ್ಕೆ ಸುಮಾರು 400 ಮಿಲಿಯಲ್ ಗ್ಯಾಲನ್ (MGD)ಒಳಚರಂಡಿಯನ್ನು ಸಂಸ್ಕರಿಸುವ ಕೊರತೆಯನ್ನು ಪೂರೈಸಲು ಹೊಸ ಒಳಚರಂಡಿ ಸಂಸ್ಕರಣಾ ಘಟಕಗಳು ಮತ್ತು ವಿಕೇಂದ್ರೀಕೃತ STPಗಳ ಸಮಯ-ಬದ್ಧ ನಿರ್ಮಾಣವನ್ನು ಒಳಗೊಂಡಿರುತ್ತದೆ.

ಸುಮಾರು ಮೂರು ವರ್ಷಗಳಲ್ಲಿ ನದಿಯನ್ನು ಸ್ವಚ್ಛಗೊಳಿಸುವ ಗುರಿಯನ್ನು ಹೊಂದಿರುವ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕಾರ್ಯಗತಗೊಳಿಸಲು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್, ದೆಹಲಿ ಜಲ ಮಂಡಳಿ, ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆ, ಪರಿಸರ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ದೆಹಲಿ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಸಂಸ್ಥೆಗಳು ಮತ್ತು ಇಲಾಖೆಗಳ ನಡುವೆ ಸರಾಗ ಸಮನ್ವಯದ ಅಗತ್ಯವಿರುತ್ತದೆ ಎಂದು ದೆಹಲಿ ಲೆಪ್ಟಿನೆಂಟ್ ಗವರ್ನರ್ ಕಚೇರಿಯ ಅಧಿಕಾರಿಯೊಬ್ಬರು ಹೇಳಿದರು.

ಈ ಕಾಮಗಾರಿಗಳ ಮೇಲ್ವಿಚಾರಣೆಯನ್ನು ವಾರಕ್ಕೊಮ್ಮೆ ಉನ್ನತ ಮಟ್ಟದಲ್ಲಿ ಮಾಡಲಾಗುತ್ತದೆ. ಕೈಗಾರಿಕಾ ಘಟಕಗಳು ಸಂಸ್ಕರಿಸದ ತ್ಯಾಜ್ಯ ನೀರನ್ನು ಚರಂಡಿಗಳಿಗೆ ಬಿಡುವುದರ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (ಡಿಪಿಸಿಸಿ) ಗೆ ನಿರ್ದೇಶಿಸಲಾಗಿದೆ ಎಂದರು.

ಈ ಹಿಂದೆ, 2023 ರ ಜನವರಿಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಆದೇಶಿಸಿದ ಲೆಫ್ಟಿನೆಂಟ್ ಗವರ್ನರ್ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಅಡಿಯಲ್ಲಿ ಯಮುನಾ ಪುನರುಜ್ಜೀವನಕ್ಕಾಗಿ ವ್ಯಾಪಕವಾದ ಯೋಜನೆಯನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಲಾಯಿತು.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ 'ವಿಕಸಿತ ದೆಹಲಿ ಸಂಕಲ್ಪ ಪತ್ರ'ದಲ್ಲಿ ನದಿಯನ್ನು ಪುನರುಜ್ಜೀವನಗೊಳಿಸಲು ಮತ್ತು ಅದರ ದಡದಲ್ಲಿ ನದಿಮುಖವನ್ನು ಅಭಿವೃದ್ಧಿಪಡಿಸಲು ಯಮುನಾ ಕೋಶವನ್ನು ಸ್ಥಾಪಿಸುವುದಾಗಿ ಭರವಸೆ ನೀಡಿತು.

ಪಕ್ಷದ ಪ್ರಣಾಳಿಕೆಯು ಒಳಚರಂಡಿ ಸಂಸ್ಕರಣಾ ಸಾಮರ್ಥ್ಯವನ್ನು ದಿನಕ್ಕೆ ಸಾವಿರ ಮಿಲಿಯನ್ ಗ್ಯಾಲನ್‌ಗಳಿಗೆ (MGD) ಮತ್ತು ಸಾಮಾನ್ಯ ತ್ಯಾಜ್ಯ ಸಂಸ್ಕರಣಾ ಘಟಕದ ಸಾಮರ್ಥ್ಯವನ್ನು 220 ಮಿಲಿಯನ್ ಗ್ಯಾಲನ್ ಗೆ ವಿಸ್ತರಿಸುವುದಾಗಿ ಭರವಸೆ ನೀಡಿತ್ತು.

ಫೆಬ್ರವರಿ 5 ರ ವಿಧಾನಸಭೆ ಚುನಾವಣೆಯಲ್ಲಿ 70 ವಿಧಾನಸಭಾ ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದ ಬಿಜೆಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬರುತ್ತಿದೆ. ಮುಂದಿನ ವಾರ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT