ಪಾಟ್ನಾ: ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಎಲ್ಲಾ 243 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ರಾಜ್ಯಸಭಾ ಸಂಸದ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ವಕ್ತಾರ ಸಂಜಯ್ ಸಿಂಗ್ ಅವರು ಶುಕ್ರವಾರ ಘೋಷಿಸಿದ್ದಾರೆ.
ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೊಸದಾಗಿ ಸ್ಥಾಪಿಸಿದ ಜನ ಸುರಾಜ್ ಪಕ್ಷ(ಜೆಎಸ್‌ಪಿ) ಸೇರಿದಂತೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಸಂಜಯ್ ಸಿಂಗ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಂಗ್, ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು, ರಾಜ್ಯ ನಾಯಕತ್ವದ ಪ್ರಸ್ತಾಪವನ್ನು ಈಗಾಗಲೇ ಅನುಮೋದಿಸಿದ್ದಾರೆ ಎಂದು ಹೇಳಿದರು. ಚುನಾವಣೆಗೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.
ಎಎಪಿ ಆಡಳಿತದ ರಾಜ್ಯಗಳಲ್ಲಿ ಪಕ್ಷದ ಸಿದ್ಧಾಂತ ಮತ್ತು ಉತ್ತಮ ಆಡಳಿತ ಆಧಾರದ ಮೇಲೆ ಎಎಪಿ ಮತ ಕೇಳಲಿದೆ ಎಂದು ಸಿಂಗ್ ಹೇಳಿದರು.
"ಅಲ್ಪಸಂಖ್ಯಾತ ಸಮುದಾಯದ ಜನರೊಂದಿಗೆ ಸಮಾಲೋಚನೆ ನಡೆಸಿದ ನಂತರ ಸೀಮಾಂಚಲ ಪ್ರದೇಶದ ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಗಳಿಗೆ ಭೇಟಿ ನೀಡಿ, ನಮ್ಮ ಚುನಾವಣಾ ಕಾರ್ಯತಂತ್ರವನ್ನು ರೂಪಿಸುತ್ತೇವೆ" ಎಂದು ಅವರು ತಿಳಿಸಿದರು.
ಬಿಹಾರದಲ್ಲಿ ನಡೆಯುತ್ತಿರುವ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್)ಯನ್ನು ಉಲ್ಲೇಖಿಸಿದ ಸಿಂಗ್, ಚುನಾವಣಾ ಆಯೋಗವು ಬಿಜೆಪಿಯ ಸೂಚನೆಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
“ಮುಸ್ಲಿಂ ಸಮುದಾಯದ ಮತದಾರರ ಹೆಸರುಗಳನ್ನು ಅಳಿಸಲಾಗುತ್ತಿದೆ, ಇದನ್ನು ಜನರು ತಿಳಿದುಕೊಳ್ಳಬೇಕು. ಮತದಾರರ ಪಟ್ಟಿಯ ಎಸ್‌ಐಆರ್ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ದೊಡ್ಡ ಪಿತೂರಿಯ ಒಂದು ಭಾಗವಾಗಿದೆ ಎಂದು ಅವರು ಆರೋಪಿಸಿದರು.